

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ದಕ್ಷಿಣ ಕನ್ನಡ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರಿ ಹುದ್ದೆಗಳನ್ನು ಗಿಟ್ಟಿಸಿಕೊಳ್ಳುವತ್ತ ಕಾರ್ಯಪ್ರವೃತ್ತರಾಗಬೇಕು ಎಂದು ಕೊಯ್ಯೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಾ.ಪ್ರಕಾಶ್ ಎಸ್. ಹೇಳಿದರು.
ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ ಅರ್ಥಶಾಸ್ತ್ರ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ 2025-26ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದರು.
ಎಲ್ಲ ಸವಲತ್ತು, ಅವಕಾಶಗಳಿದ್ದರೂ ದಕ್ಷಿಣ ಕನ್ನಡದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಹಿಂದೇಟು ಹಾಕುತ್ತಿದ್ದಾರೆ. ಪದವಿ ವಿದ್ಯಾಭ್ಯಾಸ ಸಂದರ್ಭದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿತುಕೊಂಡು ಪ್ರಯತ್ನಶೀಲರಾಗಬೇಕು ಎಂದರು.
ಅರ್ಥಶಾಸ್ತ್ರ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗ ಮುಖ್ಯಸ್ಥ ಡಾ.ಗಣರಾಜ ಕೆ. ಅಧ್ಯಕ್ಷತೆ ವಹಿಸಿದ್ದರು. ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ.ಮಹೇಶ್ ಕುಮಾರ್ ಶೆಟ್ಟಿ ಎಚ್. ಪ್ರಾಸ್ತಾವಿಕ ಮಾತನಾಡಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ಪುನೀತ್, ಸುಹೈಮಾ, ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಚಲ ಹಾಗೂ ವೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಮಾನವ್ ವಂದಿಸಿದರು.