ಮೈಸೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2.76 ಲಕ್ಷ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ರಫತ್‌ಖಾನ್ ಒತ್ತಾಯಿಸಿದರು.
ಹಲವಾರು ವರ್ಷಗಳಿಂದ ವಿವಿಧ ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಇವೆ. ಹೀಗಾಗಿ ಲಕ್ಷಾಂತರ ನಿರುದ್ಯೋಗಿಗಳು ಬೀದಿಗೆ ಬಿದ್ದಿದ್ದಾರೆ. ಅಲ್ಲದೆ ಅಪರಾಧ ಚಟುವಟಿಕೆಯಲ್ಲಿಯೂ ಭಾಗಿಯಾಗಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ಒಂದು ವರ್ಷದೊಳಗೆ ಎಲ್ಲ ಸರ್ಕಾರಿ ಇಲಾಖೆಗಳಲ್ಲಿರುವ ಖಾಲಿ ಹುದ್ದೆ ಭರ್ತಿ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ ಇದುವರೆಗೂ ಕಾರ್ಯಗತವಾಗಿಲ್ಲ ಎಂದು ದೂರಿದರು.
ಇದೇ ವೇಳೆ ಖಾಲಿ ಹುದ್ದೆಗಳೆಲ್ಲವನ್ನೂ ಹೊರಗುತ್ತಿಗೆ ನೀಡಲಾಗುತ್ತಿದೆ. ‘ಸಿ’ ಮತ್ತು ‘ಡಿ ’ ಗ್ರೂಪ್ ಉದ್ಯೋಗಿಗಳು ಗುತ್ತಿಗೆಯಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಇದಲ್ಲದೆ, ರಾಜ್ಯದಲ್ಲಿ ಪದವೀಧರರ ಸಂಖ್ಯೆಯೂ ಗಣನೀಯವಾಗಿ ಏರಿಕೆ ಆಗುತ್ತಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಎಲ್ಲ ಇಲಾಖೆಯ ಖಾಲಿ ಹುದ್ದೆ ಭರ್ತಿ ಮಾಡಬೇಕೆಂದು ಒತ್ತಾಯಿಸಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಸುಮಾರು 4,159 ಹುದ್ದೆಗಳು ಖಾಲಿ ಇದ್ದು, ಹೆಸರಿಗೆ ಮಾತ್ರ ನಾವು ಬಡವರು, ದಲಿತರು, ಅಲ್ಪಸಂಖ್ಯಾತರ ಪರ ಎಂದು ಸರ್ಕಾರ ಬಿಂಬಿಸಿಕೊಳ್ಳುತ್ತಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಸರ್ಕಾರ ಕೂಡಲೇ ಎಲ್ಲ ಖಾಲಿ ಹುದ್ದೆ ಭರ್ತಿ ಮಾಡಬೇಕು. ಇಲ್ಲವಾದರೆ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ಮುಖಂಡರಾದ ದೇವನೂರು ಪುಟ್ಟನಂಜಯ್ಯ, ಎಸ್.ಸ್ವಾಮಿ, ಮೊಹಮ್ಮದ್ ಜಹೀರ್ ಇತರರು ಇದ್ದರು.