ದ್ವಿತೀಯ ಪಿಯು ಪರೀಕ್ಷೆ ಮೊದಲ ದಿನ ಸುಸೂತ್ರ

32
Published on

ಮೈಸೂರು: ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನ ಯಾವುದೇ ಗೊಂದಲವಿಲ್ಲದೆ ಸುಸೂತ್ರವಾಗಿ ನೆರವೇರಿತು.
ಮೈಸೂರು ನಗರದ 26 ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 23 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 28,665 ವಿದ್ಯಾರ್ಥಿಗಳು ಪ್ರಥಮ ಭಾಷೆ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಇವರಲ್ಲಿ 27,954 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 711 ಮಕ್ಕಳು ಗೈರಾಗಿದ್ದರು. ಅಲ್ಲದೆ ಅರೆಬಿಕ್ ಭಾಷಾ ಪರೀಕ್ಷೆಗೆ 7 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಎಲ್ಲ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಕ್ರಮ ಮತ್ತು ನಕಲು ನಡೆಯದಂತೆ ಕೊಠಡಿಯೊಳಗೆ ಮೊಬೈಲ್ ಮತ್ತು ಇತರ ಶ್ರವಣ ಸಾಧನಗಳನ್ನು ತರುವುದನ್ನು ನಿಷೇಧಿಸಲಾಗಿತ್ತು.
ಜಿಲ್ಲಾ ಖಜಾನೆಗಳಲ್ಲಿ ಪ್ರಶ್ನೆ ಪತ್ರಿಕೆ ಇರಿಸಿದ ಕೊಠಡಿಗಳ ಸುತ್ತ ಸಿಸಿ ಕ್ಯಾಮರಾ ಕಣ್ಗಾವಲು ಇಡಲಾಗಿತ್ತು. ಪ್ರಶ್ನೆ ಪತ್ರಿಕೆ ಕೊಠಡಿಗೆ ಹೋಗುವವರ ವಿಡಿಯೋ ರೆಕಾರ್ಡ್ ಮಾಡಲಾಗಿತ್ತು. ಜತೆಗೆ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪೊಲೀಸ್ ಬಂದೋಬಸ್ತ್ ಹಾಗೂ ಆರೋಗ್ಯ ಸಹಾಯಕರ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷೆಗಳು ನಡೆಯಲಿರುವ ಕೇಂದ್ರಗಳ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ಕಲಂ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net