

ಕಾರವಾರ: ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 20 ರವರೆಗೆ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಎಲ್ಲಾ ಪರೀಕ್ಷೆಗಳು ಅತ್ಯಂತ ಪಾರದರ್ಶಕವಾಗಿ ಮತ್ತು ಪರೀಕ್ಷಾ ಮಾರ್ಗಸೂಚಿಗಳನ್ವಯ ನಡೆಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಬಾರಿ ಜಿಲ್ಲೆಯಲ್ಲಿ ಒಟ್ಟು 13,974 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುತ್ತಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 34 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಎಲ್ಲಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳನ್ನು ತಲುಪಿಸಲು ತಹಸೀಲ್ದಾರ್, ಬಿ.ಇ.ಓ ಮತ್ತು ಹಿರಿಯ ಪ್ರಾಂಶುಪಾಲರನ್ನು ಒಳಗೊಂಡ 14 ಮಾರ್ಗಾಧಿಕಾರಿಗಳ ತಂಡಗಳನ್ನು ರಚಿಸಲಾಗಿದ್ದು, ಈ ತಂಡದ ಸದಸ್ಯರು ನಿಗಧಿತ ಅವಧಿಯೊಳಗೆೆ ಪ್ರಶ್ನೆಪತ್ರಿಕೆಗಳನ್ನು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು ಎಂದರು.
ಪರೀಕ್ಷಾ ಮಂಡಳಿಯ ನಿರ್ದೇಶನದಂತೆ ಜಿಲ್ಲೆಯ 34 ಪರೀಕ್ಷಾ ಕೇಂದ್ರಗಳಲ್ಲಿನ ಸಿಸಿಟಿವಿ ಅಳವಡಿಸುವಂತೆ ಮತ್ತು ಸಿಸಿಟಿವಿ ಆಡಿಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಬಂಡಲ್ ತೆರೆಯುವುದು ಮತ್ತು ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡುವ ಕಾರ್ಯಗಳನ್ನು ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಮತ್ತು ಪ್ರಶ್ನೆ ಪತ್ರಿಕೆ ಹಾಗೂ ಉತ್ತರಪತ್ರಿಕೆ ಸಾಗಾಟದ ವಾಹನಗಳಿಗೆ ಪೋಲಿಸ್ ಭದ್ರತೆ ನೀಡುವಂತೆ ಮತ್ತು ಕಾರವಾರ ಮತ್ತು ಶಿರಸಿ ಖಜಾನೆಗಳಿಗೆ ಕಡ್ಡಾಯವಾಗಿ 24*7 ಪೋಲೀಸ್ ಬಂದೋಬಸ್ತ್ ಒದಗಿಸುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಪರೀಕ್ಷಾ ಕೇಂದ್ರಗಳಿಗೆ ಮಂಡಳಿಯಿAದ ಸಂಚಾರಿ ಜಾಗೃತ ದಳ, ಸ್ಥಾನಿಕ ಜಾಗೃತ ದಳ ನೇಮಕ ಮಾಡಲಾಗಿದ್ದು, ಕೇಂದ್ರಗಳಲ್ಲಿ ಪ್ರತಿ ಕೊಠಡಿಯಲ್ಲಿ ನಿಗದಿತ ವಿದ್ಯಾರ್ಥಿಗಳ ಸಂಖ್ಯೆ, ನೋಂದಣಿ ಸಂಖ್ಯೆಗಳನ್ನು ಹಾಕಬೇಕು. ಕೊಠಡಿಗಳಲ್ಲಿ ಸಾಕಷ್ಟ್ಟು ಗಾಳಿ, ಬೆಳಕು ಹಾಗೂ ಶುಚಿತ್ವದಿಂದ ಇರುವಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಇರಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು ಸರಬರಾಜುದಾರರನ್ನು ನೇಮಿಸಿಕೊಳ್ಳಲು ನಿಷೇಧಿಸಿದ್ದು, ಪ್ರತಿ ಕೊಠಡಿಯ ಹೊರಗಡೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಅಧೀಕ್ಷಕರನ್ನೊಳಗೊಂಡಂತೆ ಎಲ್ಲಾ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಬೇಕು. ವಿದ್ಯಾರ್ಥಿಗಳು ತಮ್ಮ ಕಾಲೇಜುಗಳ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು. ಪರೀಕ್ಷಾ ಕೇಂದ್ರದ ಸುತ್ತಲು 200 ಮೀ ವ್ಯಾಪ್ತಿಯಲ್ಲಿ ಪರೀಕ್ಷಾ ದಿನದಂದು ನಿಷೇದಾಜ್ಞೆ ಜಾರಿ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಮುಚ್ಚುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಪರೀಕ್ಷೆ ನಡೆಯುವ ದಿನದಂದು ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಹೆಸ್ಕಾಂ ಇಲಾಖೆಗೆ ಹಾಗೂ ಪರೀಕ್ಷಾ ದಿನದಂದು ಸುವ್ಯವಸ್ಥಿತವಾಗಿ ಸಾರಿಗೆ ವ್ಯವಸ್ಥೆಯನ್ನು ನಿರ್ವಹಿಸಲು ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸುವ ದೃಷ್ಟಿಯಿಂದ ಜಿಲ್ಲಾ ಮಟ್ಟದ/ತಾಲೂಕಾ ಮಟ್ಟದ ಜಾಗೃತ ದಳದ ಸದಸ್ಯರನ್ನು ನೇಮಕ ಮಾಡಿದ್ದು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಪರೀಕ್ಷೆಯಲ್ಲಿ ನಕಲು ನಡೆಯದಂತೆ, ನಕಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗದಂತೆ ಹಾಗೂ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತ ರೀತಿಯಿಂದ ಇಲಾಖೆ ಮಾರ್ಗಸೂಚಿಯನ್ವಯ ನಡೆಸಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಜಪ್ಪ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದ ಅಧಿಕಾರಿಗಳು ಉಪಸ್ಥಿತರಿದ್ದರು.