

ಮಂಡ್ಯ: ಜಿಲ್ಲೆಯಲ್ಲಿ ಮಾ.1ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಪ್ರಾರಂಭವಾಗಲಿದೆ. ಆದ್ದರಿಂದ ಯಾವುದೇ ಲೋಪದೋಷಗಳವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 26 ಕೇಂದ್ರದಲ್ಲಿ 13,996 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಪರೀಕ್ಷಾ ಕೇಂದ್ರವಿಲ್ಲ. ಆದರೂ ಎಲ್ಲ ಕೇಂದ್ರಗಳ ಮೇಲೆ ತೀವ್ರ ನಿಗಾ ವಹಿಸಬೇಕು ಎಂದರು.
ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಆಸನ ಹಾಗೂ ಪರೀಕ್ಷೆ ಬರೆಯಲು ಡೆಸ್ಕ್ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು, ಶೌಚಗೃಹ ಸೇರಿದಂತೆ ಮೂಲ ಸೌಕರ್ಯವಿರಬೇಕು. ಕೊಠಡಿಗಳಲ್ಲಿ ಗಡಿಯಾರ, ಸಿ.ಸಿ ಕ್ಯಾಮೆರಾ ವ್ಯವಸ್ಥೆ ಕಡ್ಡಾಯವಾಗಿರಬೇಕು. ಎಲ್ಲ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಬೇಕು. ಪರೀಕ್ಷೆ ನಡೆಯುವ ದಿನಗಳಂದು ಕೇಂದ್ರಗಳ ಸುತ್ತಲೂ 200 ಮೀ. ಸುತ್ತಳತೆಯಲ್ಲಿ 144 ನೇ ಕಲಂ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಜೆರಾಕ್ಸ್ ಅಂಗಡಿ ಮುಚ್ಚಿಸಬೇಕು. ಪ್ರತಿ ಕೇಂದ್ರಕ್ಕೆ ಒಬ್ಬರಂತೆ 26 ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ. ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಕೊಠಡಿ ಮೇಲ್ವಿಚಾರಕರು, ಇತರೆ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿ, ಜಿಲ್ಲಾ ಖಜಾನೆಯಿಂದ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ವಿತರಿಸಲು ಮಾರ್ಗಾಧಿಕಾರಿ ತಂಡಗಳಿಗೆ ಅಗತ್ಯವಿರುವ ವಾಹನಗಳ ಸೌಕರ್ಯ ಒದಗಿಸಬೇಕು. ಈ ತಂಡದ ಬೆಂಗಾವಲಾಗಿ ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗುವುದು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ಹಾಕುವುದರಿಂದ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು ಎಂದರು.
ಸಭೆಯಲ್ಲಿ ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಡಿಡಿಪಿಯು ಸಿ.ಚೆಲುವಯ್ಯ, ಡಿಡಿಪಿಐ ಎಚ್.ಶಿವರಾಮೇಗೌಡ, ಡಯಟ್ ಪ್ರಾಂಶುಪಾಲ ಪುರುಷೋತ್ತಮ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಆಯುಷ್ ವೈದ್ಯಾಧಿಕಾರಿ ಡಾ.ಸೀತಾಲಕ್ಷ್ಮೀ ಇತರರಿದ್ದರು.