

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಿಂದ ಪ್ರಕ್ಷುಬ್ಧಗೊಂಡಿರುವ ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಶಿವಮೊಗ್ಗದಲ್ಲಿ ಇಂದು ರಾತ್ರಿಯಿಂದ ನಾಡಿದ್ದು ಬೆಳಗ್ಗೆ ಆರು ಗಂಟೆವರೆಗೆ ಸೆಕ್ಷನ್ 144 ಜಾರಿಯಲ್ಲಿ ಇರಲಿದೆ ಎಂದು ಶಿವಮೊಗ್ಗ ಎಸ್ಪಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ. ನಾಳೆ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಅವಕಾಶವಿಲ್ಲ ಎಂದಿರುವ ಅವರು, ಅಗತ್ಯ ಬಿದ್ದರೆ ನಿಷೇಧಾಜ್ಞೆ ಮುಂದುವರಿಸುವುದಾಗಿಯೂ ಹೇಳಿದ್ದಾರೆ.
ನಗರದಲ್ಲಿ ಶಾಂತಿ ಕಾಪಾಡಲು ಎಲ್ಲ ರೀತಿಯ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಭದ್ರತೆಗಾಗಿ ಇಂದು ರಾತ್ರಿಯೇ 400ಕ್ಕೂ ಹೆಚ್ಚು ಪೊಲೀಸರು ಆಗಮಿಸಲಿದ್ದಾರೆ. ಅನಗತ್ಯವಾಗಿ ಓಡಾಡುವವರ ವಿರುದ್ಧ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ. ಮತ್ತೊಂದೆಡೆ ಶಾಂತಿ-ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಾಳೆ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿನ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.