

ಕುಷ್ಟಗಿ: ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗೆಂದು ಜಾರಿಗೊಳಿಸಿರುವ ಕಾನೂನುಗಳ ಬಗ್ಗೆ ಜನರಿಗೆ ಅರಿವು ಮೂಡಿಸಿ, ಕಾನೂನು ಉಲ್ಲಂಘನೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ ಎಂದು ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್ ಹೇಳಿದರು.
ತಾಲೂಕಿನ ಕ್ಯಾದಿಗುಪ್ಪ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ಕಾನೂನು ವಿದ್ಯಾಪ್ರಸಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳನ್ನು ಕೆಲಸಕ್ಕೆ ದೂಡದೆ ಅವರನ್ನು ಶಾಲೆಗೆ ಕಳುಹಿಸಿ ಶಿಕ್ಷಿತರನ್ನಾಗಿಸಬೇಕಿದೆ. ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿಸಿದರೆ ಕಾನೂನಿನಡಿ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ. ಮಹಿಳೆಯರನ್ನು ಗೌರವದಿಂದ ಕಾಣುವ ಮೂಲಕ ಅವರಿಗೆ ಭದ್ರತೆ ನೀಡುವ ಕಾರ್ಯವಾಗಬೇಕಿದೆ ಎಂದರು.
ವಕೀಲೆ ಸುಭದ್ರಾ ದೇಸಾಯಿ ಮೂಲಭೂತ ಹಕ್ಕುಗಳ ಮತ್ತು ಕರ್ತವ್ಯಗಳ ಕುರಿತು ಉಪನ್ಯಾಸ ನೀಡಿದರು. ಮುಖ್ಯ ಶಿಕ್ಷಕ ರಾಜೇಂದ್ರ ಸಿನ್ನೂರು ಅಧ್ಯಕ್ಷತೆ ವಹಿಸಿದ್ದರು. ಎಸ್ಡಿಎಂಸಿ ಅಧ್ಯಕ್ಷ ಹನುಮಪ್ಪ ಶಿವನಗುತ್ತಿ, ಬಿಆರ್‌ಪಿ ದಾವಲಸಾಬ್ ವಾಲಿಕಾರ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.