

ಮಂಡ್ಯ: ಜಿಲ್ಲೆಯಲ್ಲಿ ಜು.13 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ರಾಷ್ಟ್ರೀಯ ಲೋಕ ಅದಾಲತ್‌ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆದ ಹಿರಿಯ ಸಿವಿಲ್ ನ್ಯಾಯಾಧೀಶ ಆನಂದ್ ತಿಳಿಸಿದರು.
ಲೋಕ ಅದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಪೂರ್ವಭಾವಿ ಬೈಠಕ್‌ಗಳನ್ನು ನಡೆಸಲಾಗಿದೆ. ಆಸ್ತಿ ವಿವಾದಗಳನ್ನು ಒಳಗೊಂಡಂತೆ ಸಿವಿಲ್ ವ್ಯಾಜ್ಯ, ಮೋಟಾರು ವಾಹನಗಳ ಪ್ರಕರಣ, ರಾಜಿ ಆಗಬಹುದಾದಂತಹ ಕ್ರಿಮಿನಲ್ ಪ್ರಕರಣ ಮತ್ತು ಚೆಕ್ ಬೌನ್ಸ್ ಪ್ರಕರಣಗಳನ್ನು ರಾಜಿಗೆ ತೆಗೆದುಕೊಂಡು ಆಯಾ ನ್ಯಾಯಾಲಯಗಳಲ್ಲಿ ಇತ್ಯರ್ಥಗೊಳಿಸುವ ಪ್ರಯತ್ನ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಜತೆಗೆ ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ಅಂದರೆ ವ್ಯಾಜ್ಯಪೂರ್ವ ಪ್ರಕರಣಗಳು (ಬ್ಯಾಂಕ್ ವಸೂಲಾತಿ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕ ವಿವಾದ ಪ್ರಕರಣಗಳು) ಇಂತಹ ಪ್ರಕರಣಗಳಿಗೆ ಉಭಯ ಪಕ್ಷಗಾರರಿಗೆ ನೋಟಿಸ್ ನೀಡಿ ಕರೆಸಿ ಪ್ರಾಧಿಕಾರದ ವತಿಯಿಂದ ಪೂರ್ವಭಾವಿ ಬೈಠಕ್ ನಡೆಸಿ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಇಂತಹ ಪ್ರಕರಣಗಳಿಗೆ ನ್ಯಾಯಾಲಯಕ್ಕೆ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ವಕೀಲರ ಮುಖಾಂತರ ಅಥವಾ ಖುದ್ದಾಗಿ ಪ್ರಾಧಿಕಾರಕ್ಕೆ ಭೇಟಿ ನೀಡಿ ಪ್ರಕರಣವನ್ನು ರಾಜಿ ಮಾಡಿಕೊಳ್ಳಬಹುದಾಗಿರುತ್ತದೆ ಎಂದರು.
ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳು ಅಭಿವೃದ್ಧಿಯಾಗಬೇಕು. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೈ ಜೋಡಿಸಬೇಕು. ಖಾಸಗಿ ಪ್ಲೇ ಹೋಂ, ಪೂರ್ವ ಪ್ರಾಥಮಿಕ ಶಾಲೆಗಳಿಗೆ ಹೋಲಿಕೆ ಮಾಡಿದರೆ ಸರ್ಕಾರಿ ಅಂಗನವಾಡಿ ಕೇಂದ್ರಗಳು ಅಭಿವೃದ್ಧಿಯಲ್ಲಿ ಹಿಂದೆ ಉಳಿದಿದೆ. ಜಿಲ್ಲೆಯಲ್ಲಿ ಹೆಚ್ಚಾಗಿ ಕೃಷಿಕರು ಇರುವುದರಿಂದ ಮಕ್ಕಳನ್ನು ಸರ್ಕಾರಿ ಅಂಗನವಾಡಿ ಕೇಂದ್ರಗಳಿಗೆ ಕಳುಹಿಸುತ್ತಾರೆ. ಅಂಗನವಾಡಿ ಕೇಂದ್ರಗಳು ಅಭಿವೃದ್ಧಿಯಾಗಬೇಕು ಮಕ್ಕಳಿಗೆ ಪೌಷ್ಟಿಕ ಆಹಾರ, ಸ್ವಚ್ಛವಾದ ವಾತಾವರಣವನ್ನು ಸೃಷ್ಟಿಸಬೇಕು ಎಂದು ಸಲಹೆ ನೀಡಿದರು.
ಕೆಲವು ಅಂಗನವಾಡಿಯಲ್ಲಿ ಸರ್ಕಾರದಿಂದ ನೀಡುವ ಆಹಾರ ಪದಾರ್ಥಗಳನ್ನು ಸಂಗ್ರಹಿಸಿಡಲು ಸುಸಜ್ಜಿತ ವ್ಯವಸ್ಥೆ ಇಲ್ಲದಿರುವುದು ಕಂಡುಬಂದಿದೆ. ಅಡುಗೆ ಮಾಡಲು ಉಪಯೋಗಿಸುವ ಪಾತ್ರೆಗಳು ಹಳೆಯದಾಗಿದ್ದು, ಅವುಗಳನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಲಾಗಿದೆ. ಹಳೆಯ ಶೌಚಗೃಹ, ದುರಸ್ತಿ ಕೆಲಸಗಳು ಅಂಗನವಾಡಿಯ ಸುತ್ತಮುತ್ತಲು ಶುಚಿತ್ವ ಕಾಪಾಡಿಕೊಳ್ಳಲು, ಖಾಲಿ ಇರುವ ಕಡೆ ಅಂಗನವಾಡಿ ಸಹಾಯಕಿಯರ ನೇಮಕ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ತಿಳಿಸಲಾಗಿದೆ. ಮಕ್ಕಳಿಗೆ ಅನ್ನ ಬೇಳೆ ಸಾಂಬಾರು, ಮಿಲೆಟ್ ಲಾಡು, ಗೋದಿ ನುಚ್ಚಿನ ಉಪ್ಪಿಟ್ಟು ಹಾಗೂ ಮೊಟ್ಟೆ ನೀಡುತ್ತಿದ್ದಾರೆ. ಬಾಣಂತಿಯರಿಗೂ ಸಹ ಮೊಟ್ಟೆ ನೀಡಲಾಗುತ್ತಿದೆ. ಅಂಗನವಾಡಿಗಳ ಮೂಲ ಸೌಕರ್ಯ ಹಾಗೂ ಶುಚಿತ್ವವನ್ನು ಕಾಪಾಡಿಕೊಂಡರೆ ಹೆಚ್ಚು ಮಕ್ಕಳನ್ನು ಅಂಗನವಾಡಿಗೆ ಸೇರಿಸಲು ಪಾಲಕರು ಆಸಕ್ತಿ ತೋರುವ ಸಾಧ್ಯತೆಯಿರುತ್ತದೆ ಎಂದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಏಪ್ರಿಲ್ ತಿಂಗಳಲ್ಲಿ ನೀಡಲಾಗುತ್ತಿರುವ ಶೇ.5ರಷ್ಟು ರಿಯಾಯಿತಿಯನ್ನು ಜು.31 ರವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕರು ತಪ್ಪದೇ ತಮ್ಮ ಆಸ್ತಿ ತೆರಿಗೆ ಪಾವತಿಸಿ ಎಂದು ಹೇಳಿದರು.