ಸರಣಿ ಅಪಘಾತದಲ್ಲಿ ಹಲವರಿಗೆ ಗಾಯ

crime
Published on

ಬೆಳಗಾವಿ: ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸರಣಿ ಅಪಘಾತ ಸಂಭವಿಸಿದ್ದು, ಈ ವೇಳೆ ಸಾರಿಗೆ ಬಸ್‌ನಲ್ಲಿದ್ದ ಪ್ರಯಾಣಿಕರು ಗಾಯಗೊಂಡು ಜಿಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿಯ ಕಮಕಾರಟ್ಟಿ ಘಾಟ್ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ವಾಹನ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಮೂರು ಕೆಎಸ್‌ಆರ್‌ಟಿಸಿ ಬಸ್ ಅಪಘಾತ ತಪ್ಪಿಸಲು ಹೋಗಿ ದಾರಿ ಮಧ್ಯೆದಲ್ಲಿಯೇ ಬಸ್ ನಿಲ್ಲಿಸಿದ್ದಾರೆ. ಇದರಿಂದಾಗಿ ಹಿಂಬದಿ ಬರುತ್ತಿದ್ದ ಲಾರಿಗಳು ಡಿಕ್ಕಿ ಹೊಡೆದು ಸರಣಿ ಅಪಘಾತಗಳು ಸಂಭವಿಸಿವೆ. ಸಾರಿಗೆ ಬಸ್‌ಗಳ ಮಧ್ಯೆ ಸಿಲುಕೊಂಡಿದ್ದ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೆದ್ದಾರಿಯಲ್ಲಿ ಮೂರು ಗಂಟೆಗಳ ಕಾಲ ರಸ್ತೆ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು. ಈ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net