

ವಿಜಯಪುರ: ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥಕ್ಕಾಗಿ ಮಾ. 8 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಈ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ ತಿಳಿಸಿದರು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲಾ ಕೇಂದ್ರ ಹಾಗೂ ಜಿಲ್ಲೆಯ ಎಲ್ಲ ತಾಲೂಕು ನ್ಯಾಯಾಲಯಗಳಲ್ಲಿ ಈ ಅದಾಲತ್ ನಡೆಯಲಿದೆ ಎಂದು ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಕಟ್ಟಡದಲ್ಲಿ ಶುಕ್ರವಾರ ಅವರು ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.
ಲೋಕ್ ಅದಾಲತ್‌ನಲ್ಲಿ ರಾಜಿ ಸಂಧಾನಕ್ಕೆ ಒಳಪಡಬಹುದಾದ ವ್ಯಾಜ್ಯ ಪೂರ್ವ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು (ರೇರಾ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು (ಡಿಆರ್‌ಟಿ), ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ), ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು, ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದೆಂದರು.
ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಫೆ. 1ಕ್ಕೆ 44,783 ಸಿವಿಲ್ ಪ್ರಕರಣಗಳು ಹಾಗೂ 23,678 ಕ್ರಿಮಿನಲ್ ಪ್ರಕರಣಗಳು ಒಳಗೊಂಡಂತೆ ಒಟ್ಟು 68,461 ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ಇವುಗಳಲ್ಲಿ ಈಗಾಗಲೇ 4,330 ಸಿವಿಲ್ ಪ್ರಕರಣಗಳು ಹಾಗೂ 3,579 ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಒಟ್ಟು 7,909 ಪ್ರಕರಣಗಳನ್ನು ಇತ್ಯರ್ಥಕ್ಕಾಗಿ ಗುರುತಿಸಲಾಗಿದೆ. ಸಂಬಂಧಿಸಿದ ವಕೀಲರು ಹಾಗೂ ಕಕ್ಷಿದಾರರೊಂದಿಗೆ ಮಾತುಕತೆಯ ಮೂಲಕ ಇನ್ನೂ ಹೆಚ್ಚಿನ ಪ್ರಕರಣಗಳನ್ನು ಸಹ ರಾಜಿಗಾಗಿ ಗುರುತಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಪ್ರಕರಣಗಳು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಳ್ಳುವ ನಿರೀಕ್ಷೆ ಇದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್. ಹಾಗರಗಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಡಿ.ಜಿ. ಬಿರಾದಾರ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಎಸ್.ಎಸ್. ಚೂರಿ ಉಪಸ್ಥಿತರಿದ್ದರು.