ನಾಳೆಯಿಂದ ಜಿಲ್ಲೆಯಲ್ಲಿ ಸೇವಾ ಪಾಕ್ಷಿಕ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಅಂಗವಾಗಿ ಆಯೋಜನೆ

Tulasi-3
Published on

ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸೆ.17ರಿಂದ ಅ.2ರವರೆಗೆ ಸೇವಾ ಪಾಕ್ಷಿಕ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಸಿ.ಟಿ.ಮಂಜುನಾಥ್ ತಿಳಿಸಿದರು.

ಕೇಂದ್ರ ಸರ್ಕಾರ ಬಡವರ ಸೇವೆ, ಉತ್ತಮ ಆಡಳಿತ ಮತ್ತು ಕಲ್ಯಾಣಕ್ಕಾಗಿ ಬದ್ಧವಾಗಿದೆ. ದೇಶದ ಜನರಿಗಾಗಿ ನಮೋ ಅವರು ಎಲ್ಲ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮೊದಲ ಆದ್ಯತೆ ನೀಡಿದ್ದಾರೆ. ಇನ್ನು ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆಯಂತೆ 15 ದಿನ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

17ರಂದು ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗುವುದು. ದಿವ್ಯಾಂಗರಿಗೆ ಕೃತಕ ಅಂಗಾಂಗ ಜೋಡಣಾ ಶಿಬಿರ, ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಗೆ 75 ಕೆರೆಗಳ ನಿರ್ಮಾಣಕ್ಕೆ ಸರ್ಕಾರ ನಿರ್ದೇಶನ ನೀಡಿದೆ. ಪಕ್ಷದ ಕಾರ್ಯಕರ್ತರು ನದಿ, ಕೆರೆ, ಬಾವಿಗಳ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದು, ಸಸಿಗಳನ್ನು ನೆಡಲಿದ್ದಾರೆ. 2025ಕ್ಕೆ ಭಾರತವು ಕ್ಷಯ ರೋಗದಿಂದ ಮುಕ್ತ ಆಗಬೇಕೆಂಬುದು ನರೇಂದ್ರ ಮೋದಿ ಅವರ ಸಂಕಲ್ಪವಾಗಿದೆ. ಅದಕ್ಕಾಗಿ ಪ್ರತೀ ಕಾರ್ಯಕರ್ತರು, ಜನಪ್ರತಿನಿಧಿಗಳು, ಪದಾಧಿಕಾರಿಗಳು, 5 ಜನ ರೋಗಿಗಳಿಗೆ ಮಾರ್ಗದರ್ಶನ, ಚಿಕಿತ್ಸಾ ವ್ಯವಸ್ಥೆ, ಪೂರಕ ಬೆಂಬಲ ಕೊಡಲಿದ್ದಾರೆ ಎಂದು ಹೇಳಿದರು.

ಪ್ರಧಾನಮಂತ್ರಿಗಳ ಜೀವನ ಮತ್ತು ಗುರಿಯ ಕುರಿತಾಗಿ ಒಂದು ಪ್ರದರ್ಶಿನಿಯನ್ನು ಜಿಲ್ಲಾ ಮತ್ತು ಮಂಡಲ ಮಟ್ಟದಲ್ಲಿ ಆಯೋಜಿಸಲಾಗುವುದು. ಜನಕಲ್ಯಾಣ ಯೋಜನೆಗಳ ಕುರಿತಾದ ಪುಸ್ತಕ ಪ್ರದರ್ಶನ ವಿಶೇಷವಾಗಿ ಮೋದಿಃ20 ಡ್ರೀಮ್‌ಮೀಟ್ ಡಿಲವರಿ ಪುಸ್ತಕಕ್ಕೆ ಅತಿ ಹೆಚ್ಚು ಪ್ರಚಾರ ಕಲ್ಪಿಸಿಕೊಡಬೇಕು ಎಂದರು.

ಬಿಜೆಪಿ ನಗರಾಧ್ಯಕ್ಷ ವಿವೇಕ್, ಮುಖಂಡರಾದ ಶಿವಕುಮಾರ್, ನಾಗಾನಂದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net