

ಬೆಳಗಾವಿ:ನಗರದ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಿದೆ.
ಬೆಳಗಾವಿ ನಗರದ ಖಾಸಬಾಗದ ದತ್ತಾತ್ತೇಯ ಖಾನಾಪೂರೆ ಶಿಕ್ಷೆಗೊಳಗಾದ ಅಪರಾಧಿತ. 2019ರಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ಅತ್ಯಾಚಾರ ಎಸಗಿದ್ದ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ತನಿಖಾಧಿಕಾರಿ ಬಿ.ಆರ್.ಗಡ್ಡೇಕರ, ಜಗದೀಶ ಹಂಚಿನಾಳ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ವಿಶೇಷ ಶೀಘ್ರಗತಿ ಪೋಕ್ಸೋ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅಪರಾಧಿಗೆ 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.