ನಂಜನಗೂಡು : ತಾಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯೊಂದರ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ಶಾಲೆಯ ಮುಖ್ಯ ಶಿಕ್ಷಕನನ್ನು ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ದೇವಶೆಟ್ಟಿ ಎಂಬಾತ ಬಂಧಿತ ಆರೋಪಿಯಾಗಿದ್ದು, ಈತ ಶಾಲೆಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ದೇಹ ಮುಟ್ಟಿ ಹಿಂಸೆ ಕೊಡುತ್ತಿದ್ದ ಎಂದು ಮಕ್ಕಳ ಪಾಲಕರಿಗೆ ತಿಳಿಸಿದ್ದಾರೆ. ಬಳಿಕ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಗಮನಕ್ಕೆ ಪಾಲಕರು, ಅವರ ಸೂಚನೆಯಂತೆ ನಂಜನಗೂಡು ಗ್ರಾಮಾಂತರ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ಪೊಲೀಸರು ಶಿಕ್ಷಕನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಬಳಿಕ ನ್ಯಾಯಾಲಯದ ಸೂಚನೆ ಮೇರೆಗೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ಇನ್ನು ಶಾಲಾ ಮಕ್ಕಳಿಗೆ ದೌರ್ಜನ್ಯವೆಸಗಿರುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ಶಾಲೆಗೆ ತೆರಳಿ ಮಕ್ಕಳು ಹಾಗೂ ಪಾಲಕರೊಡನೆ ಮಾಲೋಚನೆ ನಡೆಸಿದರು. ಶಿಕ್ಷಕನ ಲೈಂಗಿಕ ದೌರ್ಜನ್ಯ ಕುರಿತು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಸುದ್ದಿಗಾರರಿಗೆ ಮಾಹಿತಿ ನೀಡಿದರು.