

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳ ಲಾಭ ಪ್ರತಿ ಅರ್ಹ ಫಲಾನುವಿಗೆ ದೊರಕಿಸುವ ನಿಟ್ಟಿನಲ್ಲಿ, ಗ್ಯಾರಂಟಿ ಯೋಜನೆಗಳು ಒಳಗೊಂಡಂತೆ ಸರ್ಕಾರದ ಜನಪರ ಯೋಜನೆಗಳ, ಅಭಿವೃದ್ಧಿ-ಸಾಧನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ದೇವನಹಳ್ಳಿ ತಾಲೂಕು ಅಧ್ಯಕ್ಷ ಜಗನ್ನಾಥ ಹೇಳಿದರು.
ದೇವನಹಳ್ಳಿ ಟೌನ್ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಸರ್ಕಾರದ ಎರಡು ವರ್ಷದ ಸಾಧನೆ ಹಾಗೂ ಸರ್ಕಾರದ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ, ಯುವನಿಧಿ ಯೋಜನೆಗಳ ಸಮಗ್ರ ಮಾಹಿತಿ, ಫಲಾನುಭವಿಗಳ ಅನಿಸಿಕೆ ಸೇರಿ ಸರ್ಕಾರದ ವಿವಿಧ ಯೋಜನೆಗಳನ್ನೊಳಗೊಂಡ ಸಮಗ್ರ ಮಾಹಿತಿಯುಳ್ಳ ಫಲಕಗಳನ್ನು ಅಳವಡಿಸಲಾಗಿದ್ದು, ವಸ್ತು ಪ್ರದರ್ಶನವು ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿದೆ ಎಂದರು. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯು ಹೊಸ ಮೈಲಿಗಲ್ಲು ಸ್ಥಾಪಿಸಿದ್ದು ಮಹಿಳಾ ಪ್ರಯಾಣಿಕರ ಸಂಖ್ಯೆ ಪ್ರಸ್ತುತ 500 ಕೋಟಿ ದಾಟಿದ್ದು ಅಷ್ಟೂ ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಣೆ ತಲುಪಿದೆ ಇದು ಸರ್ಕಾರದ ದೊಡ್ಡ ಸಾಧನೆ ಎಂದರೆ ತಪ್ಪಾಗಲಾರದು. ಈ ಯೋಜನೆ ಆರಂಭಿಸಿದ ದಿನದಿಂದ ಇದುವರೆಗೆ ಯಾವುದೇ ಲೋಪವಿಲ್ಲದಂತೆ ಸಮಪರ್ಕವಾಗಿ ಅನುಷ್ಟಾನಗೊಳಿಸಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಸರ್ಕಾರ ನುಡಿದಂತೆ ನಡೆದಿದೆ: ಶಕ್ತಿ ಯೋಜನೆಯ 500 ಕೋಟಿ ಉಚಿತ ಟಿಕೆಟ್ ವಿತರಣೆ ತಲುಪಿದ ಹಿನ್ನೆಲೆಯಲ್ಲಿ ದೇವನಹಳ್ಳಿ ಟೌನ್ ಬಸ್‌ನಿಲ್ದಾಣದಲ್ಲಿ ಬಸ್‌ಗಳಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿರುವ ಮಹಿಳೆಯರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು. ಇವತ್ತು ನಾವೆಲ್ಲ ಒಳ್ಳೆಯ ದಿನಗಳನ್ನು ಕಾಣುತ್ತಿದ್ದೇವೆ, ಶಕ್ತಿ ಯೋಜನೆ, ಗೃಹಲಕ್ಷ್ಮಿ, ಅನ್ನ ಭಾಗ್ಯ, ಗೃಹಜ್ಯೋತಿ, ಯುವನಿಧಿ ಈ ರೀತಿಯ ಯೋಜನೆಗಳನ್ನು ಹಿಂದಿನ ಯಾವ ಸರ್ಕಾರವು ಮಾಡಿರಲಿಲ್ಲ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೆ.ಸಿ ಮಂಜುನಾಥ ಹೇಳಿದರು. ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ವೇಳೆ ಪ್ರತಿಪಕ್ಷಗಳು ಸಾಕಷ್ಟು ಟೀಕೆ ಮಾಡಿದ್ದವು. ಇಂಥ ಯೋಜನೆ ಜಾರಿ ಮಾಡಿ ನಡೆಸಿಕೊಂಡು ಹೋಗಲು ಸಾಧ್ಯವಿಲ್ಲ ಎಂಬಂತೆ ಅನುಮಾನ ವ್ಯಕ್ತಪಡಿಸಿದ್ದವು. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಪ್ರತಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವುದರೊಂದಿಗೆ ಅದನ್ನು ನಡೆಸಿಕೊಂಡು ಬರುತ್ತಿದೆ ಎಂದು ಹೇಳಿದರು.
ಜೂ.11ರಂದು ಜಾರಿ: 2023 ರ ಜೂ.11 ರಂದು ಶಕ್ತಿ ಯೋಜನೆ ಜಾರಿಗೆ ಬಂತು, ಕಳೆದ 2 ವರ್ಷ ಒಂದು ತಿಂಗಳ ಅವಧಿಯಲ್ಲಿ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿ ಸರ್ಕಾರಿ ಸಾರಿಗೆ ಸಂಸ್ಥೆಯ 4 ನಿಗಮಗಳ ಸಾಮಾನ್ಯ ಸಾರಿಗೆ ಬಸ್‌ಗಳಲ್ಲಿ ಇದುವರೆಗೆ ಮಹಿಳಾ ಪ್ರಯಾಣಿಕರಿಗೆ ವಿತರಣೆ ಮಾಡಿದ ಉಚಿತ ಟಿಕೆಟ್‌ಗಳ ಸಂಖ್ಯೆ ಪ್ರಸ್ತುತ ದಿನಕ್ಕೆ 500 ಕೋಟಿ ದಾಟಿದೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಮುಲ್ ನಿರ್ದೇಶಕ ಎಸ್.ಪಿ ಮುನಿರಾಜು, ತಿಳಿಸಿದರು.