ಶಕ್ತಿ ಯೋಜನೆಗೆ ಜಿಲ್ಲೆಯಲ್ಲಿ ಚಾಲನೆ

IMG_9519
Published on

ಮಡಿಕೇರಿ: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜುರವರು ಭಾನುವಾರ ಚಾಲನೆ ನೀಡಿದರು.


ನಗರದ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ಶಕ್ತಿ ಉಚಿತ ಪ್ರಯಾಣ ನಮ್ಮ ಪ್ರಮಾಣ ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿ, ರಾಜ್ಯದ ನಿವಾಸಿ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ ಬಸ್ಸುಗಳಲ್ಲಿ ಮಹಿಳೆಯರು ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಸರ್ಕಾರ ಅವಕಾಶ ಮಾಡಿದೆ ಎಂದು ಹೇಳಿದರು.


ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದು ೨೧ ದಿನದಲ್ಲಿಯೇ ೫ ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆಯಡಿ ಮೊದಲ ಗ್ಯಾರಂಟಿಯನ್ನು ಜಾರಿಗೊಳಿಸಿದ್ದೇವೆ. ಉಳಿದಂತೆ ಶೀಘ್ರ ಅನ್ನಭಾಗ್ಯ ಯೋಜನೆ ಜತೆಗೆ ಆ.೧೫ ರೊಳಗೆ ಉಳಿದ ಗ್ಯಾರಂಟಿ ಯೋಜನೆ ಜಾರಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.


ಕೊಡಗು ಜಿಲ್ಲೆಯಲ್ಲಿ ೯೧ ಬಸ್ಸುಗಳು ಸಂಚರಿಸುತ್ತಿದ್ದು, ಇನ್ನೂ ಹೆಚ್ಚಿನ ಬಸ್ಸುಗಳ ಸೌಕರ್ಯ ಬೇಕಿದೆ. ಜತೆಗೆ ವಿರಾಜಪೇಟೆಯಲ್ಲಿಯೂ ಕೆಎಸ್‌ಆರ್‌ಟಿಸಿ ಘಟಕ ಸ್ಥಾಪನೆಗೆ ಕ್ರಮ ವಹಿಸಲಾಗುವುದು. ಸರ್ಕಾರದ ಯೋಜನೆಗಳು ಅರ್ಹರಿಗೆ ತಲುಪಬೇಕು. ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಸರ್ಕಾರದ ಆದೇಶವನ್ನು ಪರಿಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ಸಚಿವರು ತಾಕೀತು ಮಾಡಿದರು.


ಸಾರ್ವಜನಿಕ ಸಾರಿಗೆ ಸಂಸ್ಥೆಯಲ್ಲಿ ಪ್ರಯಾಣ ಮಾಡುವುದರಿಂದ ಹಲವು ಸಮಸ್ಯೆಗಳು ಬೆಳಕಿಗೆ ಬರುತ್ತವೆ. ಅದನ್ನು ಸರ್ಕಾರದ ಗಮನಕ್ಕೂ ತರಬಹುದಾಗಿದೆ. ಯಾವುದೇ ರೀತಿಯ ದೂರು ಬರದಂತೆ ಅಧಿಕಾರಿಗಳು ಎಚ್ಚರದಿಂದ ಕಾರ್ಯನಿರ್ವಹಿಸಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಸಚಿವರು ಹೇಳಿದರು.


ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಸರ್ಕಾರ ಪ್ರಣಾಳಿಕೆಯಲ್ಲಿ ಹೇಳಿದಂತೆ ನಡೆದುಕೊಂಡಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರು ಮೊದಲ ಗ್ಯಾರಂಟಿಯಾಗಿ ಶಕ್ತಿ ಯೋಜನೆ ಅನುಷ್ಠಾನಗೊಳಿಸಿದ್ದಾರೆ. ಜಿಲ್ಲೆಯಲ್ಲಿ ೯೧ ಬಸ್ಸುಗಳು ಸಂಚರಿಸುತ್ತಿದ್ದು, ಇದರಲ್ಲಿ ೪೧ ಬಸ್ಸುಗಳು ಮಾತ್ರ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುತ್ತಿವೆ. ಆದ್ದರಿಂದ ಬಸ್ಸುಗಳ ಸಂಖ್ಯೆ ಹೆಚ್ಚಿಸಿ, ಎಲ್ಲೆಡೆ ಸರ್ಕಾರಿ ಸಾರಿಗೆ ಬಸ್ಸುಗಳು ಸಂಚಾರ ಮಾಡುವಂತಾಗಬೇಕು ಎಂದು ಶಾಸಕರು ಕೋರಿದರು.


ಶಕ್ತಿ ಯೋಜನೆಯು ಬಡ ಹಾಗೂ ಕಷ್ಟದಲ್ಲಿರುವ ಮಹಿಳೆಯರಿಗೆ ಸಹಕಾರಿ ಆಗಲಿದೆ. ಸ್ಥಳೀಯ ಸಮಸ್ಯೆಗಳು ಇದ್ದಲ್ಲಿ ಮಾಹಿತಿ ನೀಡುವಂತಾಗಬೇಕು ಎಂದರು.


ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು ಶಕ್ತಿ ಕಾರ್ಡ್ ಪಡೆಯುವವರೆಗೆ ಆಧಾರ್ ಅಥವಾ ಚುನಾವಣಾ ಗುರುತಿನ ಚೀಟಿ ತೋರಿಸಿ ಶೂನ್ಯ ಮೌಲ್ಯದ ಟಿಕೆಟ್ ಪಡೆದು ಮಹಿಳೆಯರು ರಾಜ್ಯದ್ಯಾಂತ ಪ್ರಯಾಣ ಮಾಡಬಹುದಾಗಿದೆ. ಮಹಿಳಾ ಪ್ರಯಾಣಿಕರು ಶಕ್ತಿ ಸ್ಮಾರ್ಟ್ ಕಾರ್ಡ್‌ಗಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅಲ್ಲಿಯವರೆಗೆ ಈ ದಾಖಲೆಗಳನ್ನು ತೋರಿಸಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದರು.


ನಗರರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ತಹಶೀಲ್ದಾರ್ ಕಿರಣ್ ಗೌರಯ್ಯ, ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕಿ ಗೀತಾ, ಭದ್ರತಾ ಮತ್ತು ಜಾಗೃತಿ ವಿಭಾಗದ ಅಧಿಕಾರಿ ಶರತ್ ಕುಮಾರ್ ಇತರರು ಇದ್ದರು. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net