

ವಿಜಯವಾಣಿ ಸುದ್ದಿಜಾಲ ಧಾರವಾಡ
ಹನ್ನೆರಡನೇ ಶತಮಾನದ ವಚನ ಚಳವಳಿ ಹಾಗೂ ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಹಡಪದ ಅಪ್ಪಣ್ಣ ಸಹ ಪ್ರಮುಖರು. ಅವರ ವಚನ ಹಾಗೂ ಚಿಂತನೆಗಳು ಮನುಕುಲದ ಬೆಳವಣಿಗೆಗೆ ದಾರಿದೀಪವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.
ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಾನುವಾರ ಏರ್ಪಡಿಸಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಬಸವಣ್ಣನವರ ಬಲಗೈ ಬಂಟ ಎಂದೇ ಹೆಸರಾಗಿದ್ದ ಹಡಪದ ಅಪ್ಪಣ್ಣ ಅವರು ಅನುಭವ ಮಂಟಪದಲ್ಲಿ ಬಸವಣ್ಣ ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅಪ್ಪಣ್ಣ ಅವರು ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ ಶರಣ ಎಂದರು.
ಹುಡಾ ಅಧ್ಯಕ್ಷ ಶಾಕೀರ ಸನದಿ ಮಾತನಾಡಿ, ಉತ್ತಮ ಸಮಾಜ ನಿರ್ಮಿಸಲು ಶಿಕ್ಷಣದಿಂದ ಮಾತ್ರ ಸಾಧ್ಯ. ಶಿವಶರಣರು ಒಂದು ಜಾತಿಗೆ ಸೀಮಿತವಾಗಿಲ್ಲ. ಇಡೀ ಸಮಾಜದ ಬದಲಾವಣೆಗೆ ಶ್ರಮಿಸಿದರು. ಅಂತಹ ಶರಣರ ನೈತಿಕತೆ, ಸಂಸತಿ ಮತ್ತು ವಚನಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಸವದತ್ತಿಯ ಡಾ. ಬಾಳಪ್ಪ ಈರಪ್ಪ ಚಿನಗುಡಿ ಅವರು ಶಿವಶರಣ ಹಡಪದ ಅಪ್ಪಣ್ಣ ಜೀವನ ಹಾಗೂ ಸಾಧನೆ ಕುರಿತು ಉಪನ್ಯಾಸ ನೀಡಿದರು. ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಈರಣ್ಣ ಚಿಕ್ಕಬೆಳ್ಳಿಕಟ್ಟಿ, ಪಕ್ಕಿರೇಶ ಹಡಪದ, ನಿಂಗರಾಜ ಹಡಪದ, ಸಂಗಮೇಶ ಬೂದಿಹಾಳ, ಸಂಘದ ಸದಸ್ಯರು, ಇತರರು ಇದ್ದರು.
ಕುಮಾರ ಬೆಕ್ಕೇರಿ ಸ್ವಾಗತಿಸಿದರು.