ಸ್ಥಾನಮಾನದ ಭರವಸೆಯಿಂದ ಶೆಟ್ಟರ್ ಬಿಜೆಪಿ ಸೇರ್ಪಡೆ

Munenakoppa 2
Published on

ಹುಬ್ಬಳ್ಳಿ: ಕೇಂದ್ರದ ನಾಯಕರು ಜಗದೀಶ ಶೆಟ್ಟರ್ ಅವರಿಗೆ ಸೂಕ್ತ ಸ್ಥಾನಮಾನ ಕೊಡುವುದಾಗಿ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಬಿಜೆಪಿಗೆ ವಾಪಸ್ ಆಗಿದ್ದಾರೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಜಿಲ್ಲಾ ಬಿಜೆಪಿಯಲ್ಲಿ ಸಣ್ಣಪುಟ್ಟ ಸಮಸ್ಯೆಗಳಿವೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಅವುಗಳನ್ನು ಸರಿಪಡಿಸಲಾಗುವುದು. ಧಾರವಾಡದ ಬಿಜೆಪಿ ಎಂಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರೇ ಇದ್ದಾರೆ. ಶೆಟ್ಟರ್ ಅವರಿಗೆ ಸೂಕ್ತ ಸ್ಥಾನಮಾನ ಎಂದಿರುವುದರಿಂದ ಹೈಕಮಾಂಡ್ ಮುಂದಿನ ಯಾವ ನಿರ್ಧಾರ ತೆಗೆದುಕೊಳ್ಳುವುದೋ ನನಗೆ ಗೊತ್ತಿಲ್ಲ ಎಂದರು.
ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಆಗಬೇಕೆಂಬುದು ನಮ್ಮ ಗುರಿ. ಅದಕ್ಕಾಗಿ ನಾವು ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ಕೇಂದ್ರ ಸಚಿವ ಅಮಿತ್‌ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಶೆಟ್ಟರ್ ಅವರನ್ನು ಪಕ್ಷಕ್ಕೆ ಮತ್ತೆ ಕರೆತಂದಿದ್ದಾರೆ. ಇದರಿಂದ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಿದೆ ಎಂದರು.
ಬಿಜೆಪಿಯಲ್ಲಿ ಲಿಂಗಾಯತರಿಗೆ ಯಾವುದೇ ರೀತಿ ಅನ್ಯಾಯವಾಗಿಲ್ಲ. ನಾನು ಸೇರಿದಂತೆ ಬಹಳಷ್ಟು ಜನ ಲಿಂಗಾಯತರು ಸೂಕ್ತ ಸ್ಥಾನಮಾನ ಪಡೆದಿದ್ದೇವೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಣ್ಣಪುಟ್ಟ ತೊಂದರೆಗಳಾಗಿದ್ದವು. ಇದರ ಪರಿಣಾಮ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.
ನನ್ನ ವೈಯಕ್ತಿಕ ಕಾರಣಗಳಿಗಾಗಿ ರಾಜಕೀಯ ಚಟುವಟಿಕೆಗಳಿಂದ ದೂರ ಉಳಿದಿದ್ದೆ. ಕಾಂಗ್ರೆಸ್ ನಾಯಕರು ನನ್ನನ್ನು ತಮ್ಮ ಪಕ್ಷಕ್ಕೆ ಕರೆಯಲು ಬಂದಿದ್ದರು. ನಾನು ಮೊದಲಿನಿಂದಲೂ ಕಾಂಗ್ರೆಸ್ ವಿರೋಧಿ ಹಾಗಾಗಿ ಪಕ್ಷಾಂತರವನ್ನು ನಿರಾಕರಿಸಿದ್ದೆ. ನಾನು ಬಿಜೆಪಿ ಬಿಟ್ಟು ಹೋಗುವುದಿಲ್ಲ. ಆಗ ನಮ್ಮ ಪಕ್ಷದ ನಾಯಕರ ವಿರುದ್ಧ ಮಾತನಾಡಿಲ್ಲ. ತಿಳಿವಳಿಕೆ, ಸಲಹೆ ನೀಡಿದ್ದೆ. ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿಯಲ್ಲ. ಬಿಕ್ಕಟ್ಟಿನ ಸಂದರ್ಭದಲ್ಲಿಯೂ ನಾನು ಬಿಜೆಪಿ ಪರವಾಗಿಯೇ ನಿಂತಿದ್ದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net