

ಶಿವಮೊಗ್ಗ: ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲ್ವೆ ಮಾರ್ಗ ನಿರ್ಮಾಣಕ್ಕೆ 150 ಕೋಟಿ ರೂ. ಸೇರಿದಂತೆ ಜಿಲ್ಲೆಯ ಇತರೆ ರೈಲ್ವೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಲಭಿಸಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ 8 ವರ್ಷದಲ್ಲಿ ಜಿಲ್ಲೆಯ ರೈಲ್ವೆ ಯೋಜನೆಗಳಿಗೆ ಗಣನೀಯ ಪ್ರಮಾಣದ ಅನುದಾನ ಬಿಡುಗಡೆ ಮಾಡಿದೆ. 2023-24ರ ಕೇಂದ್ರ ಮುಂಗಡ ಪತ್ರದಲ್ಲೂ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಯೋಜನೆಗಳಿಗೆ ಅನುದಾನ ಒದಗಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
2019-20ರ ಕೇಂದ್ರ ಮುಂಗಡ ಪತ್ರದಲ್ಲಿ ಮಂಜೂರು ಮಾಡಿರುವ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲು ಮಾರ್ಗ ಯೋಜನೆಯ ಮೊದಲನೇ ಹಂತವಾದ ಶಿವಮೊಗ್ಗ-ಶಿಕಾರಿಪುರ ಸೆಕ್ಷನ್‌ನ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ರೈಲ್ವೆ ಇಲಾಖೆ ಈಗಾಗಲೇ ಟೆಂಡರ್ ಕರೆದಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಕೈಗೆತ್ತಿಕೊಳ್ಳುಲಾಗುವುದು ಎಂದು ತಿಳಿಸಿದರು.
ಬೀರೂರು-ತಾಳಗುಪ್ಪ ಮಾರ್ಗದ ವಿದ್ಯುದೀಕರಣಕ್ಕಾಗಿ 56 ಕೋಟಿ ರೂ. ಅನುದಾನ ಒದಗಿಸಿದ್ದು, ಶೀಘ್ರದಲ್ಲಿಯೇ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ಶಿವಮೊಗ್ಗದಲ್ಲಿ ನಿರ್ಮಿಸುತ್ತಿರುವ 4 ರೈಲ್ವೆ ಮೇಲ್ಸೇತುವೆಗಳನ್ನು 2023-24ರಲ್ಲಿ ಪೂರ್ಣಗೊಳಿಸಲು ಅಗತ್ಯ ಅನುದಾನ ಒದಗಿಸಿದೆ. ರೈಲ್ವೆ ಯೋಜನೆಗಳಿಗೆ ಅಗತ್ಯ ಅನುದಾನ ಕಲ್ಪಿಸಿಕೊಡುಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸೇತುವೆಯಾಗಿ ಕಾರ್ಯನಿರ್ವಹಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಧನ್ಯವಾದ ಹೇಳಬೇಕಾಗುತ್ತದೆ ಎಂದರು.