

ಶಿವಮೊಗ್ಗ: ಶಿವಮೊಗ್ಗ ನಗರ ಪಾಲಿಕೆಯ ನಾಲ್ಕನೇ ಅವಧಿಗೆ ಮೇಯರ್ ಹಾಗೂ ಉಪ ಮೇಯರ್ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆದಿದ್ದು, ಮೇೀಯರ್ ಆಗಿ ಎಸ್.ಶಿವಕುಮಾರ್ ಹಾಗೂ ಉಪಮೇಯರ್ ಆಗಿ ಲಕ್ಷ್ಮೀ ಶಂಕರ ನಾಯ್ಕ ಆಯ್ಕೆಯಾದರು.
ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಎಸ್.ಶಿವಕುಮಾರ್, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಿಂದ ಆರ್.ಸಿ.ನಾಯ್ಕ, ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಶಂಕರ್ ಗನ್ನಿ ಹಾಗೂ ಮೈತ್ರಿಕೂಟದ ಪರವಾಗಿ ರೇಖಾ ರಂಗನಾಥ್ ನಾಮಪತ್ರ ಸಲ್ಲಿಸಿದ್ದರು.
ಮೇಯರ್ ಹಾಗೂ ಉಪಮೇಯರ್ ಆಯ್ಕೆ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ತಲಾ 26 ಹಾಗೂ ಮೈತ್ರಿಕೂಟದ ಅಭ್ಯರ್ಥಿಗೆ ತಲಾ 11 ಮತಗಳು ಚಲಾವಣೆಯಾದವು. ಓರ್ವ ಸದಸ್ಯ ತಟಸ್ಥವಾಗಿ ಉಳಿದರು. ಅಂತಿಮವಾಗಿ ಬಿಜೆಪಿ ಅಭ್ಯರ್ಥಿಗಳನ್ನು ವಿಜಯಶಾಲಿಗಳೆಂದು ಚುನಾವಣಾಧಿಕಾರಿ, ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಘೋಷಿಸಿದರು.
ಪಾಲಿಕೆಯ 35 ಸದಸ್ಯರ ಜತೆಗೆ ಶಾಸಕರಾದ ಕೆ.ಎಸ್.ಈಶ್ವರಪ್ಪ, ಕೆ.ಬಿ.ಅಶೋಕ ನಾಯ್ಕ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮತದಾನದಲ್ಲಿ ಪಾಲ್ಗೊಂಡಿದ್ದರು. ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಗೈರಾಗಿದ್ದರು. ನಾಲ್ಕು ಸ್ಥಾಯಿ ಸಮಿತಿಗಳಿಗೆ ತಲಾ ಏಳು ಸದಸ್ಯರ ಆಯ್ಕೆ ಅಧಿಕಾರವನ್ನು ನೂತನ ಮೇಯರ್‌ಗೆ ನೀಡಲಾಗಿದೆ. ಸ್ಥಾಯಿ ಸಮಿತಿ ರಚನೆ ದಿನಾಂಕ ಇನ್ನಷ್ಟೇ ನಿಗದಿಯಾಗಬೇಕಿದೆ.
ಚುನಾವಣೆ ಪ್ರಕ್ರಿಯೆ ವೇಳೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಪಾಲಿಕೆ ಆಯುಕ್ತ ಕೆ.ಮಾಯಣ್ಣ ಗೌಡ ಉಪಸ್ಥಿತರಿದ್ದರು.