ಶಿವಮೊಗ್ಗ ಗಲಭೆಗೆ ಸಂಬಂಧಿಸಿದಂತೆ 62 ಜನ ವಶಕ್ಕೆ: ಐಜಿಪಿ ರವಿ

IMG-20201203-WA0062
Published on

ಶಿವಮೊಗ್ಗ: ಬಜರಂಗ ದಳದ ಮುಖಂಡ ನಾಗೇಶ್ ಮೇಲೆ ಹಲ್ಲೆ ಬಳಿಕ ಗಾಂಧಿಬಜಾರ್ ಒಳಗೊಂಡಂತೆ ಹಲವೆಡೆ ನಡೆದ ಗಲಭೆಗೆ ಸಂಬಂಧಿಸಿದಂತೆ 62 ಜನರನ್ನು ವಶಕ್ಕೆ ಪಡೆಯಲಾಗಿದ್ದು ಪ್ರಮುಖ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೂರ್ವ ವಲಯದ ಐಜಿಪಿ ಎಸ್.ರವಿ ತಿಳಿಸಿದರು.
ಗಲಭೆಗೆ ಸಂಬಂಧಿಸಿದಂತೆ ದೊಡ್ಡಪೇಟೆ, ಕೋಟೆ ಮತ್ತು ತುಂಗಾನಗರ ಠಾಣೆ ವ್ಯಾಪ್ತಿಯಲ್ಲಿ 10 ಎಫ್‌ಐಆರ್ ದಾಖಲಿಸಲಾಗಿದೆ. ಏಳೆಂಟು ಕಡೆ ಕಲ್ಲು ತೂರಾಟ ನಡೆಸಲಾಗಿದೆ. ಇದರಿಂದ 19 ಜನರು ಗಾಯಗೊಂಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮತ್ತು ಮೂರೂ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಯಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.
ಗುರುವಾರ ಬೆಳಗ್ಗೆ 6.30ರ ಸುಮಾರಿಗೆ ನಾಗೇಶ್ ಮೇಲೆ ಮಾಸ್ಕ್ ಧರಿಸಿದ್ದ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಮಧ್ಯಾಹ್ನ 3.30ರ ಬಳಿಕ ಗಾಂಧಿಬಜಾರ್, ಚೋರ್‌ಬಜಾರ್ ಸೇರಿ ಕೆಲವೆಡೆ ಕಲ್ಲು ತೂರಾಟ ನಡೆಸಲಾಗಿದೆ. ಗಲಭೆ ಸಂಪೂರ್ಣ ನಿಯಂತ್ರಣಕ್ಕೆ ಬಂದಿದ್ದು ನಗರದಲ್ಲಿ ಶಾಂತಿ ಕಾಪಾಡುವುದು ಪೊಲೀಸರ ಮುಂದಿರುವ ಪ್ರಮುಖ ಸವಾಲಾಗಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net