ಶಿವಮೊಗ್ಗದಲ್ಲಿ ರೂಪಾಂತರಿ ವೈರಸ್ ಇಲ್ಲ: ಸಚಿವ ಈಶ್ವರಪ್ಪ ಸ್ಪಷ್ಟನೆ

12 smg K.S. Eshwarappa (1)
Published on

ಶಿವಮೊಗ್ಗ: ದುಬೈಯಿಂದ ಬಂದಿದ್ದ 58 ವರ್ಷದ ವ್ಯಕ್ತಿಗೆ ಕರೊನಾ ವರದಿ ನೆಗಟಿವ್ ಬಂದಿದ್ದು, ಜಿಲ್ಲೆಯಲ್ಲಿ ದಕ್ಷಿಣ ಆಫ್ರಿಕಾ ಮೂಲಕ ರೂಪಾಂತರಿ ವೈರಸ್ ಪತ್ತೆಯಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು.
ಸಿಮ್ಸ್ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುಬೈಯಿಂದ ಆಗಮಿಸಿದ್ದ ವ್ಯಕ್ತಿಯ ಕರೊನಾ ವರದಿ ನೆಗೆಟಿವ್ ಬಂದಿದೆ. ಪ್ರಾಥಮಿಕ ಸಂಪರ್ಕ ಹೊಂದಿದ್ದ 9 ಹಾಗೂ ದ್ವಿತೀಯ ಸಂಪರ್ಕ ಹೊಂದಿದ್ದ 30 ಮಂದಿ ತಪಾಸಣೆ ನಡೆಸಿದ್ದು, ಎಲ್ಲರ ವರದಿ ನೆಗೆಟಿವ್ ಇದೆ. ಈ ಹಿನ್ನೆಲೆಯಲ್ಲಿ ಯಾರೂ ಅನಗತ್ಯವಾಗಿ ಭಯಪಡುವ ಅಗತ್ಯವಿಲ್ಲ ಎಂದರು.
ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಕರೊನಾ ಲಸಿಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಕಲಾಗುತ್ತಿದೆ. ಸ್ಥಳದಲ್ಲಿಯೇ ನೋಂದಣಿ ಮಾಡಲು ಅವಕಾಶವಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ ಅವರು, ನೆರೆಯ ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು, ನಮ್ಮ ರಾಜ್ಯದಲ್ಲಿ ಸಹ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸರ್ಕಾರ 1ರಿಂದ 5ನೇ ತರಗತಿ ಮಕ್ಕಳಿಗೆ ಶಾಲೆ ಆರಂಭಿಸಲು ಅನುಮತಿ ನೀಡಿಲ್ಲ. 6ನೇ ತರಗತಿ ಮೇಲ್ಪಟ್ಟವರಿಗೆ ಮಾತ್ರ ಶಾಲೆ ನಡೆಸಲು ಅನುಮತಿ ನೀಡಿದೆ ಎಂದರು.
ಡಿಸಿ ಕೆ.ಬಿ.ಶಿವಕುಮಾರ್, ಡಿಎಚ್‌ಒ ಡಾ. ರಾಜೇಶ್ ಸುರಗೀಹಳ್ಳಿ, ಮೆಗ್ಗಾನ್ ವೈದ್ಯಕೀಯ ಅಧೀಕ್ಷಕ ಡಾ. ಎಸ್.ಶ್ರೀಧರ್, ಮೇಯರ್ ಸುನಿತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಪಾಲಿಕೆ ಸದಸ್ಯರಾದ ಎಸ್.ಎನ್.ಚನ್ನಬಸಪ್ಪ, ಎಸ್.ಜ್ಞಾನೇಶ್ವರ್, ಅನಿತಾ ರವಿಶಂಕರ್, ಕುವೆಂಪು ವಿವಿ ಸಿಂಡಿಗೇಟ್ ಸದಸ್ಯ ಸಂತೋಷ್ ಬಳ್ಳೆಕೆರೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net