

ಶಿವಮೊಗ್ಗ: ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಜ.8ರಂದು ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರಾಜ್ಯ ಮಟ್ಟದ ಸಮಾವೇಶ ಏರ್ಪಡಿಸಲಾಗಿದೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಧರ್ಮಸೇನ ತಿಳಿಸಿದರು.
ಕಾಂಗ್ರೆಸ್ಸೇತರ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪರಿಶಿಷ್ಟ ಜಾತಿಯವರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಆ ಸಮಾಜಕ್ಕೆ ಸಿಕ್ಕ ಯೋಜನೆಗಳನ್ನು ವಿವರಿಸುವುದು ಈ ಸಮಾವೇಶದ ಮುಖ್ಯ ಉದ್ಧೇಶವಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಮುಖರಾದ ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ ಸೇರಿದಂತೆ ಅನೇಕ ನಾಯಕರು ಈ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ. ಸಮಾವೇಶಕ್ಕೆ ಈಗಾಗಲೇ ಸಿದ್ಧತೆಗಳು ಆರಂಭವಾಗಿದ್ದು, ಪ್ರತಿ ಜಿಲ್ಲೆಗೂ ತೆರಳಿ ಪರಿಶಿಷ್ಟ ಜಾತಿಯ ಮುಖಂಡರು ಹಾಗೂ ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದರು.
ಬಿಜೆಪಿ ಸರ್ಕಾರದ ಆಡಳಿತದಲ್ಲಿ ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನೂ ಖರ್ಚು ಮಾಡದೇ ಎಸ್ಸಿ ಸಮುದಾಯಕ್ಕೆ ದ್ರೋಹ ಮಾಡಲಾಗುತ್ತಿದೆ. ಎಸ್ಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗದಂತಾಗಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಪರಿಸ್ಥಿತಿ ಇರಲಿಲ್ಲ. ಎಸ್ಸಿ, ಎಸ್ಟಿ ಸಮುದಾಯಕ್ಕೆ ಹೆಚ್ಚು ಕೊಡುಗೆಗಳನ್ನು ನೀಡಲಾಗಿತ್ತು ಎಂದು ತಿಳಿಸಿದರು.
ಜಿಲ್ಲಾ ಎಸ್ಸಿ ವಿಭಾಗದ ಅಧ್ಯಕ್ಷ ಟಿ.ಕೃಷ್ಣಪ್ಪ, ಕಾಂಗ್ರೆಸ್ ಮುಖಂಡರಾದ ಬಲದೇವ ಕೃಷ್ಣ, ಎಸ್.ರವಿಕುಮಾರ್, ಚಂದ್ರಶೇಖರ್, ಡಾ.ಶ್ರೀನಿವಾಸ್ ಕರಿಯಣ್ಣ, ವೈ.ಎಚ್.ನಾಗರಾಜ್ ಮುಂತಾದವರು ಸುದ್ದಿಗೋಷ್ಠಿಯಲ್ಲಿದ್ದರು.