

ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸುವ ಮೂಲಕ ಅವರನ್ನು ಹಣಿಯುವ ಕೆಲಸಕ್ಕೆ ಬಿಜೆಪಿ ಮುಂದಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಮಂಗಳವಾರ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಹೋರಾಟಕ್ಕೆ ಕಾಂಗ್ರೆಸ್ ಯೋಜನೆ ರೂಪಿಸುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷರ ಮೇಲೆ ತನಿಖಾ ಸಂಸ್ಥೆಗಳ ಮೂಲಕ ದಾಳಿ ನಡೆಸಲಾಗುತ್ತದೆ. ಇಲ್ಲವೇ ವಿಚಾರಣೆಗೆ ಅವರನ್ನು ಕರೆಯಲಾಗುತ್ತದೆ. ಕೇಂದ್ರ ಗೃಹ ಸಚಿವ ಅಮಿತ್ ಷಾ, ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಪಕ್ಷಗಳ ನಾಯಕರನ್ನು ಕಟ್ಟಿಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದರು.
ಪ್ರತಿಪಕ್ಷಗಳ ಪ್ರಭಾವಿ ನಾಯಕರನ್ನು ಮೂಲೆಗುಂಪು ಮಾಡಲು ಸಿಬಿಐ, ಇಡಿ ಹಾಗೂ ಐಟಿ ಇಲಾಖೆಗಳನ್ನು ಕೇಂದ್ರ ಸರ್ಕಾರ ಬಳಸಿಕೊಳ್ಳುತ್ತಿದೆ. ಇದು ದ್ವೇಷ ರಾಜಕಾರಣಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಪ್ರತಿಪಕ್ಷಗಳ ನಾಯಕರನ್ನು ಮುಗಿಸುವುದೇ ಕೇಂದ್ರ ಸರ್ಕಾರದ ಒಂದಂಶದ ಕಾರ್ಯಕ್ರಮವಾಗಿದೆ ಎಂದು ಎಚ್.ಎಸ್.ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದರು.
ಮೂರು ವರ್ಷಗಳಿಂದ ತನಿಖೆ ನೆಪದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಕಿರುಕುಳ ನೀಡಲಾಗುತ್ತಿದೆ. ಅವರ ವಿರುದ್ಧ ದಾಖಲಾಗಿರುವುದು ಒಂದೇ ಎಫ್‌ಐಆರ್ ಆದರೂ ಪದೇಪದೆ ದಾಳಿ ನಡೆಸುತ್ತಿರುವುದೇಕೆ? ಮನಸ್ಸು ಬಂದಾಗಲೆಲ್ಲಾ ಅಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್ ನೀಡುವುದೇಕೆ? ಎಂದು ಪ್ರಶ್ನಿಸಿದರು.