ಶಿವಮೊಗ್ಗ: ದ್ವಿತೀಯ ಪಿಯುಸಿ (puc) ಪರೀಕ್ಷೆ (exam) ಯು ಫೆ.28ರಿಂದ ಮಾರ್ಚ್ 17ರವರೆಗೆ ನಡೆಯಲಿದ್ದು ಜಿಲ್ಲೆಯ ಒಟ್ಟು 41 ಪರೀಕ್ಷಾ ಕೇಂದ್ರಗಳಲ್ಲಿ 19,909 ವಿದ್ಯಾರ್ಥಿಗಳು (students) ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಪರೀಕ್ಷಾ ಸಿದ್ಧತೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಾರದರ್ಶಕ ಮತ್ತು ಶಾಂತಿಯುತವಾಗಿ ಪರೀಕ್ಷೆಗಳನ್ನು ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪರೀಕ್ಷೆ ಅವಧಿಯಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಪ್ರಶ್ನೆಪತ್ರಿಕೆ ಸಾಗಾಟ ಮಾಡುವ ತ್ರಿ ಸದಸ್ಯ ಸಮಿತಿ ವಾಹನಕ್ಕೆ ಪೊಲೀಸ್ ಸಿಬ್ಬಂದಿ ಭದ್ರತೆ ಒದಗಿಸಲು ಹಾಗೂ ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಬಂದೋಬಸ್ತ್ ನೀಡುವಂತೆ ಪೊಲೀಸ್ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದರು.
ಪ್ರಶ್ನೆಪತ್ರಿಕೆ ಸಾಗಿಸುವ ವಾಹನಕ್ಕೆ ಜಿಪಿಎಸ್ ಅಳವಡಿಸಿ ನಿಗಾವಹಿಸಲು ವ್ಯವಸ್ಥೆ ಮಾಡಲಾಗಿದೆ. ಖಜಾನೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಇರಿಸುವ ಹಾಗೂ ವಿತರಿಸುವ ಸಮಯವೂ ಸೇರಿದಂತೆ ನಿರಂತರವಾಗಿ ಸಿಸಿ ಟವಿ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗುತ್ತದೆ. ಪ್ರಶ್ನೆಪತ್ರಿಕೆ ವಿತರಣೆಗೆ 12 ಮಾರ್ಗಗಳನ್ನು ಗುರುತಿಸಲಾಗಿದೆ. ಮುಖ್ಯ ಅಧೀಕ್ಷಕರು ಹಾಗೂ ಉತ್ತರಪತ್ರಿಕೆ ಪಾಲಕರ ನೇಮಕವಾಗಿದೆ ಎಂದು ಹೇಳಿದರು.
ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಅಳವಡಿಸಬೇಕು. ಪರೀಕ್ಷಾರ್ಥಿಗಳಿಗೆ ಸೂಕ್ತ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ವೆಬ್‌ಕಾಸ್ಟಿಂಗ್ ವ್ಯವಸ್ಥೆ ಇರುವುದರಿಂದ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂನವರು ಜಾಗ್ರತೆ ವಹಿಸಬೇಕೆಂದು ಸೂಚಿಸಿದರು.
ಜಿಪಂ ಸಿಇಒ ಎನ್.ಹೇಮಂತ್, ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್, ಎಎಸ್ಪಿ ಕಾರಿಯಪ್ಪ, ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಬಸ್ ವ್ಯವಸ್ಥೆಗೆ ಪಟ್ಟಿಕೊಡಿ
ಬಸ್ ಸೌಕರ್ಯ ಸಮರ್ಪಕವಾಗಿರದ ಪ್ರದೇಶಗಳಿಂದ ಪರೀಕ್ಷಾ ಕೇಂದ್ರಗಳಿಗೆ ಬರುವ ಪರೀಕ್ಷಾರ್ಥಿಗಳಿಗೆ ಬಸ್ ಸೌಲಭ್ಯ ಒದಗಿಸಲಾಗುವುದು. ಇದಕ್ಕಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಬಳಸಿಕೊಳ್ಳಲಾಗುವುದು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಂತಹ ಮಾರ್ಗಗಳನ್ನು ಗುರುತಿಸಿ ಪಟ್ಟಿ ನೀಡುವಂತೆ ಎನ್.ಹೇಮಂತ್ ಹೇಳಿದರು.
ಪರೀಕ್ಷಾ ಕೇಂದ್ರದ ಅಧೀಕ್ಷಕರಿಗೆ ತರಬೇತಿ ನೀಡಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ತಮ್ಮ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಪರೀಕ್ಷಾ ಸಿಬ್ಬಂದಿಗೆ ತರಬೇತಿ ನೀಡಲಿದ್ದಾರೆ. ಶಿಕ್ಷಣ ಇಲಾಖೆಯಿಂದ ತಾಲೂಕು ಮತ್ತು ಜಿಲ್ಲಾ ಹಂತದಲ್ಲಿ ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ತಲಾ ಇಬ್ಬರು ಜಾಗೃತದಳದ ಸಿಬ್ಬಂದಿ ನೇಮಿಸಲಾಗುವುದು ಎಂದು ತಿಳಿಸಿದರು.