ರಾಜೀನಾಮೆ ನಿರ್ಧಾರ ಕೈಬಿಟ್ಟ ಬೇಳೂರು | Misses Out on Ministerial Post

ಬೇಳೂರು ಗೋಪಾಲಕೃಷ್ಣ
ಬೇಳೂರು ಗೋಪಾಲಕೃಷ್ಣ
Published on
ಸಾಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಲಹೆ ಮೇರೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.
ಸಚಿವ ಸ್ಥಾನ ತಪ್ಪಿದ ಹಿನ್ನೆಲೆಯಲ್ಲಿ ಸೋಮವಾರ ಅವರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು. ಮಂಗಳವಾರ ಮುಖ್ಯಮಂತ್ರಿಗಳ ಭೇಟಿ ನಂತರ ನಿರ್ಧಾರದಿಂದ ಹಿಂದೆ ಸರಿದಿದ್ದಾಗಿ ಹೇಳಿಕೆ ನೀಡಿದ್ದಾರೆ.
ಸಚಿವ ಸ್ಥಾನ ಸಿಗದಿರುವುದು ನನಗೆ ತುಂಬ ಬೇಸರವಾಗಿತ್ತು. ಕಾರ್ಯಕರ್ತರು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಂದು ಕಣ್ಣೀರು ಹಾಕುತ್ತ ವಾಪಸ್ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜೀನಾಮೆ ಕೊಡುವ ನಿರ್ಧಾರಕ್ಕೆ ಬಂದಿದ್ದೆ. ಸೋಮವಾರ ರಾತ್ರಿ ಮುಖ್ಯಮಂತ್ರಿ ಅವರು ನನಗೆ ಕರೆಮಾಡಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಬೇಡ. ತಾಳ್ಮೆ ಇರಲಿ ಎಂದು ಹೇಳಿದ್ದರು. ಬೆಳಗ್ಗೆ ಮನೆಗೆ ಕರೆಸಿಕೊಂಡು ಕೆಲವು ಸಲಹೆಗಳನ್ನು ನೀಡಿದ್ದಾರೆ. ಪಕ್ಷ ಎಂದು ಬಂದಾಗ ಕೆಲವೊಮ್ಮೆ ಎಲ್ಲವನ್ನೂ ಸಹಿಸಿಕೊಂಡು ಹೋಗಬೇಕಾಗುತ್ತದೆ ಎಂದಿದ್ದಾರೆ.
ಕಳೆದ ಮೂರು ವರ್ಷಗಳಿಂದ ಪಕ್ಷನಿಷ್ಠನಾಗಿ ಕೆಲಸ ಮಾಡಿದ್ದೇನೆ. ಮುಂದೆ ಅವಕಾಶ ಮಾಡಿಕೊಡುತ್ತೇನೆ ಎಂದು ಹೇಳಿದ್ದರು. ಮುಂಬರುವ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಮುಖ್ಯಮಂತ್ರಿಗಳ ಕೈಬಲಪಡಿಸಲು ನಿರ್ಧರಿಸಿದ್ದೇನೆ. ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ, ಪಕ್ಷದ ಚಟುವಟಿಕೆಗಳಲ್ಲಿ ತೊಡಗುವಂತೆ ಕ್ಷೇತ್ರದ ಕಾರ್ಯಕರ್ತರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net