

ಸೊರಬ: ಅನ್ನಭಾಗ್ಯ ಯೋಜನೆಯಡಿ ರಾಗಿ ಬದಲು ಅಕ್ಕಿಯನ್ನೇ ನೀಡಲು ಜನರು ಒತ್ತಾಯಿಸುತ್ತಿರುವ ಕುರಿತು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಜಯಶೀಲ ಗೌಡ ಹೇಳಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಿಸುತ್ತಿರುವ ರಾಗಿ ಕಳಪೆಯಾಗಿದ್ದು, ಸಾರ್ವಜನಿಕರಿಂದ ಹೆಚ್ಚಿನ ದೂರು ಬರುತ್ತಿವೆ. ಆಹಾರ ಇಲಾಖೆ ಅಧಿಕಾರಿಗಳು ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ತಿಳಿಸಿದರು.
ತಾಪಂ ಸಹಾಯಕ ನಿರ್ದೇಶಕ ಶ್ರೀರಾಮ್ ಮಾತನಾಡಿ, ಗ್ರಾಪಂ ವ್ಯಾಪ್ತಿಯಲ್ಲಿರುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ 11ಎ ಹಾಗೂ 11ಬಿ ದಾಖಲೆಗಳನ್ನು ಅಭಿಯಾನ ಮಾದರಿಯಲ್ಲಿ ಮನೆ-ಮನೆ ಹಾಗೂ ಸ್ಥಳದಲ್ಲಿಯೇ ವಿತರಿಸುವ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಗ್ರಾಮೀಣ ಭಾಗದ ಆಸ್ತಿಗಳಿಗೆ ಇ-ಸ್ವತ್ತು ದಾಖಲೆಗಳನ್ನು ತ್ವರಿತವಾಗಿ ಮತ್ತು ಪಾರದರ್ಶಕವಾಗಿ ವಿತರಿಸುವುದು. ಪಂಚತಂತ್ರ 2.0 ಹಾಗೂ ಇ-ಸ್ವತ್ತು 2.0 ತಂತ್ರಾಂಶದ ಮೂಲಕ ಆಸ್ತಿಗಳ ಸಮೀಕ್ಷೆ ನಡೆಸಿ ದಾಖಲೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಗ್ರಾಪಂ ಮಟ್ಟದ ವಿಶೇಷ ಶಿಬಿರ, ಬಾಪೂಜಿ ಸೇವಾ ಕೇಂದ್ರ ಹಾಗೂ ಗ್ರಾಮ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಪ್ರಭಾಕರ ಶಿಗ್ಗಾ, ಅಧಿಕಾರಿಗಳು, ತಾಲೂಕು ಸಮಿತಿ ಸದಸ್ಯರು ಇದ್ದರು.