

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಮತ್ತು ಸಿಮ್ಸ್(ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ)ಯಲ್ಲಿನ ಭ್ರಷ್ಟಾಚಾರ, ರೋಗಿಗಳಿಗೆ ಅಸಮರ್ಪಕ ಚಿಕಿತ್ಸೆ ಹಾಗೂ ವೈದ್ಯಾಧಿಕಾರಿಗಳು ದುರಾಡಳಿತ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಕಾರ್ಯಕರ್ತರು ಆಸ್ಪತ್ರೆ ಮುಂಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಸಿಗುತ್ತಿಲ್ಲ. ವೈದ್ಯಕೀಯ ಪರೀಕ್ಷೆಗಳಿಗೆ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಔಷಧಗಳನ್ನು ಮೆಡಿಕಲ್ ಸ್ಟೋರ್ಗಳಿಂದ ಖರೀದಿಸುವಂತೆ ಸೂಚಿಸಲಾಗುತ್ತಿದೆ. ಸ್ಕ್ಯಾನಿಂಗ್ ಸೇರಿ ಹಲವು ಪರೀಕ್ಷೆಗಳಿಗೂ ಖಾಸಗಿ ಕೇಂದ್ರಗಳ ಮೊರೆ ಹೋಗುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಕಿಡಿಕಾರಿದರು.
ಜಿಲ್ಲಾ ಬೋಧನಾ ಆಸ್ಪತ್ರೆಯ ಶೌಚ ಗೃಹಗಳಲ್ಲಿ ಸ್ವಚ್ಛತೆ ಮರಿಚಿಕೆಯಾಗಿದೆ. ಬಡವರು ಹಣವಿಲ್ಲದೆ ಚಿಕಿತ್ಸೆಗಾಗಿ ಬಂದಾಗಲೂ ಹೊರಗಡೆ ಪರೀಕ್ಷೆ ಮಾಡಿಸಿಕೊಂಡು ಬರುವಂತೆ ಸೂಚಿಸಲಾಗುತ್ತಿದೆ. ಇತ್ತೀಚೆಗೆ ವ್ಯಕ್ತಿಯೊಬ್ಬರಿಗೆ ಆಸ್ಪತ್ರೆಯೊಳಗೆ ಪ್ರವೇಶಿಸಲು ಅವಕಾಶ ನೀಡದ ಪರಿಣಾಮ ಅವರು ಜೀವ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದರು. ಇಂತಹ ಘಟನೆಗಳು ನಡೆದರೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಷ್ಟೇ ಅಲ್ಲದೆ, ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭದಲ್ಲಿ ಹಣ ಪಡೆಯಲಾಗುತ್ತಿದೆ. ಹೆಣ್ಣು ಮಗು ಜನಿಸಿದರೆ 1,800 ರೂ. ಹಾಗೂ ಗಂಡು ಮಗು ಜನಿಸಿದರೆ 2,500 ರೂ. ಪಡೆಯಲಾಗುತ್ತಿದೆ. ಆಸ್ಪತ್ರೆಯ ಆಡಳಿತದಲ್ಲಿ ದುರಾಡಳಿತ ನಡೆಸುತ್ತಿರುವ ಅಧಿಕಾರಿಗಳನ್ನು ತಕ್ಷಣವೇ ವಜಾಗೊಳಿಸಬೇಕು ಅಥವಾ ಬೇರೆಡೆಗೆ ವರ್ಗಾಯಿಸಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹಾಗೂ ಆರೋಗ್ಯ ಸಚಿವ ಯು.ಟಿ.ಖಾದರ್ ಅವರಿಗೆ ಮನವಿ ಮಾಡಿದರು.
ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ ಕನಸಿನ ಕೂಸಾಗಿದ್ದ ಜಿಲ್ಲಾಸ್ಪತ್ರೆ ಇಂದು ಬೋಧನಾ ಆಸ್ಪತ್ರೆಯಾಗಿ ರೂಪುಗೊಂಡಿದೆ. ಆದರೆ ಬಡ ಜನರಿಗೆ ಸಮರ್ಪಕ ಚಿಕಿತ್ಸೆ ದೊರೆಯದಿದ್ದರೆ ಇಂತಹ ಆಸ್ಪತ್ರೆಗಳಿಂದ ಏನು ಪ್ರಯೋಜನ ಎಂದು ಪ್ರಶ್ನಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಶಾಸಕರು ತಕ್ಷಣ ಆಸ್ಪತ್ರೆಯ ಸಮಸ್ಯೆಗಳತ್ತ ಗಮನಹರಿಸಬೇಕು. ಜಿಲ್ಲಾಡಳಿತ ಹಾಗೂ ಸರ್ಕಾರ ಈ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಿಂಹ ಸೇನೆಯ ಜಿಲ್ಲಾಧ್ಯಕ್ಷ ಎಸ್.ಎಂ.ಮಧುಸೂದನ್, ರವಿಕುಮಾರ್, ಕಾರ್ತಿಕ್ ಸೇರಿ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ದರು.