ಹೊಳೆಹೊನ್ನೂರು: ಪ್ರತಿಯೊಬ್ಬರೂ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಹನುಮಂತು ಹೇಳಿದರು.
ಸಮೀಪದ ಆಗರದಹಳ್ಳಿಯಲ್ಲಿ ಮಂಗಳವಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಚಾಲನೆ ನೀಡಿ ಮಾತನಾಡಿದರ ಅವರು, ಎಸ್‌ಐಆರ್ ಪ್ರಕ್ರಿಯೆಯು ಪ್ರತಿಯೊಬ್ಬ ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ಉದ್ದೇಶದಿಂದ ನಡೆಸಲಾಗುತ್ತಿದೆ. ಯಾವೊಂದು ಮನೆಯು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು ಎಂದರು.
ಬಿಎಲ್‌ಒಗಳು ಕೇಳುವ ಅಗತ್ಯ ದಾಖಲೆಗಳನ್ನು ಒದಗಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಸ್ವೀಕೃತಿಯನ್ನು ಪಡೆದುಕೊಂಡು ನೂತನ ಮತದಾರರ ಪಟ್ಟಿ ಪ್ರಕಟವಾಗುವವರೆಗೂ ಜೋಪಾನವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಬಿಟ್ಟುಹೋಗಿದ್ದರೆ ಅಪೀಲು ಹೋಗಲು ಆ ಸ್ವೀಕೃತಿ ಬಹಳ ಮುಖ್ಯವಾಗಿರುತ್ತದೆ ಎಂದು ತಿಳಿಸಿದರು.
ಕಾರ್ಯಕರ್ತರು ಬೂತ್‌ನಲ್ಲಿನ ಪ್ರತಿ ಮನೆಗೂ ಹೋಗಿ ಬಿಎಲ್‌ಒಗಳು ನೀಡುವ ಅರ್ಜಿಗಳನ್ನು ಸರಿಯಾಗಿ ಭರ್ತಿ ಮಾಡಿದ್ದಾರೋ ಇಲ್ಲವೋ ಎಂಬುದನ್ನು ಪರಿಶೀಲಿಸಬೇಕು. ಒಂದು ವೇಳೆ ಏನಾದರೂ ಸಣ್ಣಪುಟ್ಟ ವ್ಯತ್ಯಾಸಗಳು ಇದ್ದರೆ ಅವುಗಳನ್ನು ಸರಿಪಡಿಸಿ ಯಾವುದೇ ಮತದಾರರು ತಪ್ಪಿ ಹೋಗದಂತೆ ನೋಡಿಕೊಳ್ಳಬೇಕು ಎಂದರು.