ತಾಯಂದಿರ ಮರಣ ಪ್ರಮಾಣ ಶೂನ್ಯಕ್ಕಿಳಿಸಿ | Safe Motherhood Campaign
ಸಿಮ್ಸ್ ಕಾಲೇಜಿನಲ್ಲಿ ನಡೆದ ಒಂದು ದಿನದ ವೈದ್ಯಕೀಯ ಶಿಕ್ಷಣ ಮತ್ತು ಪ್ರಾಯೋಗಿಕ ತರಬೇತಿ ಕಾರ್ಯಾಗಾರದಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಪ್ರಾಧ್ಯಾಪಕರು, ವೈದ್ಯರು, ಶುಶ್ರೂಷಕರು ಪಾಲ್ಗೊಂಡಿದ್ದರು.
ಹೆರಿಗೆ ಸಮಯದಲ್ಲಿ ತಾಯಂದಿರು ಎದುರಿಸುವ ತುರ್ತು ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಿ
ಜಿಲ್ಲೆಯಲ್ಲಿ ಸುರಕ್ಷಿತ ಮಾತೃತ್ವ ಅಭಿಯಾನವು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು
ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಸಿಮ್ಸ್) ನಿರ್ದೇಶಕ ಡಾ. ವಿರೂಪಾಕ್ಷಪ್ಪ ಸಲಹೆ
ಶಿವಮೊಗ್ಗ: ಗರ್ಭಾವಸ್ಥೆ ಹಾಗೂ ಹೆರಿಗೆ ಸಮಯದಲ್ಲಿ ತಾಯಂದಿರು ಎದುರಿಸುವ ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಿ, ತಾಯಂದಿರ ಮರಣ(Maternal mortality) ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವ ನಿಟ್ಟಿನಲ್ಲಿ ಪ್ರಸೂತಿ ತಜ್ಞರು ಕಾರ್ಯೋನ್ಮುಖರಾಗಬೇಕಿದೆ ಎಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಸಿಮ್ಸ್) ನಿರ್ದೇಶಕ ಡಾ. ವಿರೂಪಾಕ್ಷಪ್ಪ ಹೇಳಿದರು.
ಸಿಮ್ಸ್ ಕಾಲೇಜಿನಲ್ಲಿ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆ) ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗ(Obstetrics and Gynecology Department)ದಿಂದ ಶಿವಮೊಗ್ಗ ಪ್ರಸೂತಿ ಮತ್ತು ಸ್ತ್ರೀರೋಗ ಸೊಸೈಟಿ ಹಾಗೂ ಇಂಡಿಯನ್ ಕಾಲೇಜ್ ಆಫ್ ಅಬ್ಸೆಟ್ರಿಷಿಯನ್ಸ್ ಆ್ಯಂಡ್ ಗೈನಕಾಲಜಿಸ್ಟ್ ಸಹಯೋಗದಲ್ಲಿ ಒಂದು ದಿನದ ವೈದ್ಯಕೀಯ ಶಿಕ್ಷಣ ಮತ್ತು ಪ್ರಾಯೋಗಿಕ ತರಬೇತಿ ಕಾರ್ಯಾಗಾರ(Medical Education and Practical Training Workshop) ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಸುರಕ್ಷಿತ ಮಾತೃತ್ವ ಅಭಿಯಾನ(Safe Motherhood Campaign)ವು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ವಿಶೇಷವಾಗಿ ಮಲೆನಾಡಿನಲ್ಲಿ ಹೆರಿಗೆ ಸಂದರ್ಭದಲ್ಲಿ ಗರ್ಭಿಣಿಯರು ನಾನಾ ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಾರೆ. ಅಂತಹ ಕ್ಲಿಷ್ಟಕರ ಸಂದರ್ಭಗಳಲ್ಲಿ ವೈದ್ಯರು, ಶುಶ್ರೂಷಕರು ಅವರ ನೆರವಿಗೆ ಧಾವಿಸಬೇಕು ಎಂದರು.
ಗರ್ಭಿಣಿಯರಿಗೆ ಹೆರಿಗೆ ಸಂದರ್ಭದಲ್ಲಿ ಎದುರಾಗಬಹುದಾದ ತೊಂದರೆಗಳನ್ನು ಸಮರ್ಥವಾಗಿ ನಿರ್ವಹಿಸಲು ವೈದ್ಯರು ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗುವುದು. ಆ ನಿಟ್ಟಿನಲ್ಲಿ ರಾಜ್ಯಮಟ್ಟದ ಕಾರ್ಯಾಗಾರ(State level workshop)ದ ಸದುಪಯೋಗವನ್ನು ವೈದ್ಯರು, ಶುಶ್ರೂಷಕರು ಪಡೆಯಬೇಕು ಎಂದು ಸಲಹೆ ನೀಡಿದರು.
ಕಾರ್ಯಾಗಾರದಲ್ಲಿ ಡಾ. ಶೀಲಾ ಮಾನೆ ಮತ್ತು ಡಾ. ಶೋಭಾ ಗುಡಿ ಅವರು ವಿಶೇಷ ಉಪನ್ಯಾಸ ನೀಡಿದರು. ಹೆರಿಗೆಯ ಸಮಯದಲ್ಲಿ ಉಂಟಾಗುವ ರಕ್ತಸ್ರಾವ ಮತ್ತು ರಕ್ತದೊತ್ತಡವನ್ನು ಹೇಗೆ ಪರಿಣಾಮಕಾರಿಯಾಗಿ ತಡೆಯಬಹುದು ಎಂಬುದರ ಕುರಿತು ಪ್ರಾಯೋಗಿಕ ಪ್ರಾತ್ಯಕ್ಷಿಕೆಯ ಮೂಲಕ ಸುದೀರ್ಘವಾಗಿ ಮಾಹಿತಿ ನೀಡಿದರು.
ಡಿಎಚ್‌ಒ ಡಾ. ಕೆ.ಎಸ್.ನಟರಾಜ್, ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ತಿಮ್ಮಪ್ಪ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಓ.ಮಲ್ಲಪ್ಪ, ಸಿಮ್ಸ್‌ನ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥ ಡಾ. ಪ್ರಶಾಂತ್ ಹಾಗೂ ವಿಭಾಗದ ಎಲ್ಲ ಪ್ರಾಧ್ಯಾಪಕರು ಹಾಜರಿದ್ದರು.
"
ಹೆರಿಗೆ ಸಮಯದಲ್ಲಿ ತಾಯಂದಿರಿಗೆ ಎದುರಾಗುವ ತೀವ್ರ ರಕ್ತದೊತ್ತಡ ಹಾಗೂ ಪ್ರಸವೋತ್ತರ ರಕ್ತಸ್ರಾವ(High blood pressure and postpartum hemorrhage)ದಂತಹ ತುರ್ತು ಸಂದರ್ಭಗಳನ್ನು ಅತ್ಯಂತ ವೇಗವಾಗಿ ಮತ್ತು ವ್ಯವಸ್ಥಿತವಾಗಿ ವೈದ್ಯರು ಹಾಗೂ ಶುಶ್ರೂಷಕರು ನಿರ್ವಹಿಸಬೇಕು. ಆ ಬಗ್ಗೆ ಕಾರ್ಯಾಗಾರದಲ್ಲಿ ಪ್ರಾಯೋಗಿಕ ಕೌಶಲಗಳ ತರಬೇತಿ ನೀಡಲಾಗುವುದು.