ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷದ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ರಾಜ್ಯಾದ್ಯಂತ ಡಿ. 1ರಿಂದ 25ರವರೆಗೆ ಸೇವಾದೂತ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ದೇಶಾದ್ಯಂತ ನಡೆಯಲಿರುವ ಅಭಿಯಾನದ ಭಾಗವಾಗಿ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಪಕ್ಷದ ಹಿರಿಯ ಕಾರ್ಯಕರ್ತರನ್ನು ನಿಯೋಜಿಸಲಾಗುವುದು. ವಿಸ್ತಾರಕರು ಹಾಗೂ ಸೇವಾದೂತರಾಗಿ ಆಯ್ಕೆಯಾಗುವ ಕಾರ್ಯಕರ್ತರು ನಿಗದಿಪಡಿಸಿದ ವಿಧಾನಸಭಾ ಕ್ಷೇತ್ರಗಳಲ್ಲಿ 25 ದಿನಗಳ ಕಾಲ ವಾಸ್ತವ್ಯ ಹೂಡುವರು ಎಂದು ತಿಳಿಸಿದರು.
ಅಭಿಯಾನದ ಅವಧಿಯಲ್ಲಿ ಪ್ರತಿದಿನ ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು. ಯುವಜನರೊಂದಿಗೆ ಸಂವಾದ ನಡೆಸಲಾಗುವುದು. ಸಾರ್ವಜನಿಕರೊಂದಿಗೆ ಸಂಪರ್ಕ ಬೆಳೆಸಲಾಗುವುದು. ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಕೊಡುಗೆಗಳು ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ಆಡಳಿತಾವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಮತ್ತು ಸಾಧನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದರು.