ಶಿವಮೊಗ್ಗ: ಮಾನಸಿಕ ಅಸ್ವಸ್ಥೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ 27 ವರ್ಷದ ಯುವಕನಿಗೆ 3 ವರ್ಷ ಕಠಿಣ ಕಾರಾಗೃಹವಾಸ ಹಾಗೂ 50 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 13 ವರ್ಷದ ಬಾಲಕಿ ಮೇಲೆ ಯುವಕ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಸಂಬಂಧ ಪೋಕ್ಸೊ ಅಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಪಿಎಸ್ಐ ರಾಜುರೆಡ್ಡಿ ಅವರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ನಿಂಗನಗೌಡ ಭ. ಪಾಟೀಲ್ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಯುವನಿಗೆ ಶಿಕ್ಷೆ ಪ್ರಕಟಿಸಿದ್ದಾರೆ. ದಂಡದ ಮೊತ್ತದ ಜತೆಗೆ ಸಂತ್ರಸ್ತಗೆ 40 ಸಾವಿರ ರೂ. ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.