ಶಿವಮೊಗ್ಗ: ರಾಜ್ಯದ ಖಜಾನೆ ಖಾಲಿಯಾಗಿದೆ ಎಂಬ ಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ, ಸಂಕಷ್ಟದಲ್ಲಿರುವ ರೈತರ ಖಾತೆಗೆ ತಲುಪದ ಪರಿಹಾರ, ಕೈಸೇರದ ವೃದ್ಧಾಪ್ಯ ಮತ್ತು ವಿಧವಾ ವೇತನ, ಇವೆಲ್ಲವೂ ಆಡಳಿತ ವ್ಯವಸ್ಥೆ ವೈಫಲ್ಯಕ್ಕೆ ಸಾಕ್ಷಿ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.
ರಾಜ್ಯದಲ್ಲಿ ಶೇ.82ರಷ್ಟು ಬೆಳೆ ನಾಶವಾಗಿದೆ ಎಂದು ಕಂದಾಯ ಸಚಿವರೇ ತಿಳಿಸಿದ್ದಾರೆ. ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಎಸ್‌ಡಿಆರ್‌ಎಫ್(ರಾಜ್ಯ ವಿಪತ್ತು ಪರಿಹಾರ ನಿಧಿ) ಅಡಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದೆವು. ಆದರೆ ಸರ್ಕಾರ 2,500 ರೂ. ಘೋಷಿಸಿದ್ದು, ಆ ಹಣವೂ ರೈತರ ಖಾತೆಗೆ ಜಮೆಯಾಗಿಲ್ಲ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಬೇಕೆಂಬುದು ಹಲವು ವರ್ಷಗಳ ಹೋರಾಟವಾಗಿತ್ತು. ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದ ಸಂದರ್ಭ ಎಸ್‌ಸಿ ಮೀಸಲಾತಿಯನ್ನು ಶೇ.15ರಿಂದ 17ಕ್ಕೆ ಹಾಗೂ ಎಸ್‌ಟಿ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಹೆಚ್ಚಿಸುವ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಪ್ರಸ್ತುತ ಸರ್ಕಾರ ನ್ಯಾಯಾಲಯದಲ್ಲಿ ಈ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ದೂರಿದರು.
ಆಡಳಿತ ಬದಲಾಗಬೇಕು ಎಂಬ ನಿರ್ಧಾರ ತೆಗೆದುಕೊಳ್ಳುವ ಹಕ್ಕು ಜನರಿಗಿದೆಯೇ ಹೊರತು ಬೀದಿಗಿಳಿದು ಅರಾಜಕತೆ ಸೃಷ್ಟಿಸುವವರಿಗಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ಇದು ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರಿಗಿರುವ ಅಸಮಾಧಾನವನ್ನು ಪ್ರತಿಬಿಂಬಿಸುತ್ತದೆ ಎಂದರು.