ಶಿವಮೊಗ್ಗ: ಸ್ಟಿಂಗ್ ಆಪರೇಷನ್ ಪ್ರಕರಣದಿಂದ ಪಕ್ಷಕ್ಕೆ ಕೊಂಚ ಹಿನ್ನಡೆಯಾಗಿರುವುದು ನಿಜ. ಆದರೆ ಸಿಎಂ ಡಿ.ಕೆ.ಶಿವಕುಮಾರ್ ಅವರ ಸ್ಥಾನಕ್ಕೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಾಯಕತ್ವಕ್ಕೂ ಯಾವುದೇ ಕುಂದುಂಟಾಗಿಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.
ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಸದೃಢ ಸರ್ಕಾರವಿದೆ. ಯಾವ ಕಾರಣಕ್ಕೂ ಮುಖ್ಯಮಂತ್ರಿ ಕುರ್ಚಿ ಅಲುಗಾಡುವ ಪ್ರಶ್ನೆಯೇ ಇಲ್ಲ. ಮೊದಲು ವಿಜಯೇಂದ್ರ ತಮ್ಮ ಸ್ಥಾನ ಉಳಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟರೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಮುಖಂಡರು ಸುಳ್ಳು ಸುದ್ದಿ ಹರಡಿದ್ದರು. ಆದರೆ ಈಗ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿಯಲ್ಲೇ ಕಸರತ್ತು ನಡೆಯುತ್ತಿದೆ ಎಂದರು.
ಬಿಜೆಪಿಯವರ ತತ್ವ, ಸಿದ್ಧಾಂತ, ಮಹಿಳಾ ಪರ ನಿಲುವು, ಹಿಂದುತ್ವದ ಬಗ್ಗೆ ಅವರ ಮಾತು ಹಾಗೂ ವರ್ತನೆಗಳನ್ನು ಜನತೆ ಗಮನಿಸಬೇಕು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಂತಹ ಹಿರಿಯ ನಾಯಕರ ಕುಟುಂಬದವರಿಂದ ಬರುತ್ತಿರುವ ಹೇಳಿಕೆಗಳು ಯಾವ ಮಟ್ಟದಲ್ಲಿವೆ ಎಂಬುದನ್ನು ಗಮನಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರ ಬಗ್ಗೆ ಬಿಜೆಪಿಯವರು ಬಳಸುತ್ತಿರುವ ಪದಗಳು ಅವರ ಹತಾಶೆಯನ್ನು ತೋರಿಸುತ್ತಿವೆ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷವನ್ನು ತುಂಡು ತುಂಡು ಮಾಡುತ್ತೇವೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಅಧಿಕಾರ ಕಳೆದುಕೊಂಡ ಹತಾಶೆಯಿಂದ ಇಂತಹ ಹೇಳಿಕೆ ನೀಡುತ್ತಿದ್ದಾರೆ. ನಮ್ಮದು 104 ಅಥವಾ 108 ಶಾಸಕರಿಂದ ರಚನೆಯಾದ ಸರ್ಕಾರವಲ್ಲ. ಈ ಸರ್ಕಾರವನ್ನು ಉರುಳಿಸುವ ತಾಕತ್ತು ಯಾರಿಗೂ ಇಲ್ಲ ಎಂದು ಹೇಳಿದರು.
ಜೆಡಿಎಸ್ ಮತ್ತು ಬಿಜೆಪಿ ನಾಯಕರು ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ತಮ್ಮಲ್ಲೇ ಗೊಂದಲದಲ್ಲಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮುಂದೆ ತಾನೇ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಹೊಂದಿದ್ದಾರೆ. ಆದರೆ ಮೈತ್ರಿಯಲ್ಲಿ ಮುಖ್ಯಮಂತ್ರಿ ಸ್ಥಾನ ಯಾರಿಗೆ ಸಿಗುತ್ತದೆ ಎಂಬುದೇ ಸ್ಪಷ್ಟವಿಲ್ಲ. ಚುನಾವಣೆ ಬಂದಾಗ ಅವರ ಮೈತ್ರಿಯ ನೈಜ ಸ್ಥಿತಿ ಗೊತ್ತಾಗಲಿದೆ ಎಂದು ಬೇಳೂರು ಹೇಳಿದರು.