ಭೋವಿ ಸಮುದಾಯ ಭವನ ನಿರ್ಮಾಣ

BLY- 15-3
ಬಳ್ಳಾರಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ರಾಘವ ಕಲಾಮಂದಿರದಲ್ಲಿ ಸೋಮವಾರ ಏರ್ಪಡಿಸಿದ್ದ 852ನೇ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಉದ್ಘಾಟಿಸಿದರು. ಪಾಲಿಕೆ ಮೇಯರ್ ಬಿ.ಶ್ವೇತಾ, ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಇನ್ನಿತರರಿದ್ದರು.
Published on

ಬಳ್ಳಾರಿ: ಜಿಲ್ಲೆಯಲ್ಲಿ ಸುಸಜ್ಜಿತ ಭೋವಿ ಸಮುದಾಯ ಭವನವನ್ನು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಹೇಳಿದರು.

ನಗರದ ಡಾ.ರಾಜ್‌ಕುಮಾರ್ ರಸ್ತೆಯ ರಾಘವ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಏರ್ಪಡಿಸಿದ್ದ 852ನೇ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಳ್ಳಾರಿ ನಗರ ಅಥವಾ ಗ್ರಾಮೀಣ ಭಾಗದಲ್ಲಿ ಸ್ಥಳ ಗುರುತಿಸಿದರೆ ಶೀಘ್ರದಲ್ಲಿ ಭೂಮಿ ಪೂಜೆ ನೆರವೇರಿಸಲಾಗುವುದು. ನನ್ನ ವೈಯಕ್ತಿಕವಾಗಿ 10 ಲಕ್ಷ ರೂ. ನೀಡುತ್ತೇನೆ ಎಂದರು.

ಭೋವಿ ಸಮುದಾಯದವರು ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಆರ್ಥಿಕವಾಗಿ ಸದೃಢರಾಗಬೇಕು. ಕಲ್ಲು, ಮಣ್ಣು, ಸಿಮೆಂಟ್ ಹೊತ್ತು ಮನೆ ಕಟ್ಟುವಂತವರು. ನಮ್ಮ ಕಾಲದ ಇಂಜಿನಿಯರ್‌ಗಳು ಇವರೇ ಆಗಿರುತ್ತಿದ್ದರು. ಕೇವಲ ತಮ್ಮ ಯುಕ್ತಿಯಿಂದಲೇ ಸಂಪೂರ್ಣ ಮನೆ ಸುಂದರವಾಗಿ ಕಟ್ಟಲು ಅಡಿಪಾಯ ಹಾಕುತ್ತಿದ್ದರು ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ನಿಷ್ಠಿರುದ್ರಪ್ಪ ಮಾತನಾಡಿ, ಸಂತರ ವಿಚಾರ ಹಾಗೂ ಸಾಧನೆಗಳನ್ನು ಪ್ರತಿಯೊಬ್ಬರು ಅನುಕರಣೆ ಮಾಡುವ ಮನೋಭಾವನೆ ಹೊಂದುವಂತಾಗಬೇಕು. ಶಿವಯೋಗಿ ಸಿದ್ಧರಾಮೇಶ್ವರರು 68 ಸಾವಿರ ವಚನಗಳನ್ನು ರಚಿಸಿ ಹಾಡಿದ್ದಾರೆ. ಅವುಗಳ ಪೈಕಿ ಈಗ 1,679 ವಚನಗಳು ಮಾತ್ರ ಲಭಿಸಿವೆ. ಶಿವಯೋಗಿ ಸಿದ್ದರಾಮೇಶ್ವರರು ಶ್ರೇಷ್ಠ ವಚನಕಾರರಾಗಿದ್ದರು. ಸಮಾಜ ಸೇವೆಯಲ್ಲಿ ತೃಪ್ತಿ ಪಡೆಯುತ್ತಿದ್ದರು. ಅಧ್ಯಾತ್ಮ ಪರಂಪರೆ ಹೊಂದಿರುವ ದೇಶದಲ್ಲಿ ದಿವ್ಯಜ್ಞಾನಿಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಅವರ ಚಿಂತನೆಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ತಿಳಿಸಿದರು.

ಪಾಲಿಕೆ ಮೇಯರ್ ಬಿ.ಶ್ವೇತಾ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net