

ಶನಿವಾರಸಂತೆ: ಕೊಡ್ಲಿಪೇಟೆ ಹೋಬಳಿಯ ಆಗಳಿ ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಉದ್ಭವ ಶ್ರೀ ಗವಿ ಸಿದ್ದೇಶ್ವರಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಶನಿವಾರ ವಿಶೇಷ ಪೂಜಾ ಕೈಂಕರ್ಯ ಜರುಗಿತು.
ಆಗಳಿ ಗ್ರಾಮದ ಮೀಸಲು ಅರಣ್ಯದಲ್ಲಿರುವ ಏಕಶಿಲೆ ಬೆಟ್ಟದ ಗುಹೆಯೊಳಗಿರುವ ಉದ್ಭವ ಸಿದ್ದೇಶ್ವರಸ್ವಾಮಿ ದೇವಾಲಯಕ್ಕೆ ಸ್ಥಳೀಯರು ಮತ್ತು ಸುತ್ತಮುತ್ತಲ ಗ್ರಾಮಗಳ ಭಕ್ತಾದಿಗಳು ಆಗಮಿಸಿದ್ದರು. ಶನಿವಾರ ಗವಿ ಸಿದ್ದೇಶ್ವರಸ್ವಾಮಿ ದೇವಾಲಯದಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಉದ್ಭವ ಶ್ರೀ ಗವಿಸಿದ್ದೇಶ್ವರಸ್ವಾಮಿಗೆ ವಿಶೇಷ ಪೂಜಾ ವಿಧಿ-ವಿಧಾನ ನೆರವೇರಿಸಲಾಯಿತು. ಭಕ್ತಾದಿಗಳು ತಂಡೋಪತಂಡವಾಗಿ ದೇವಾಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಅರ್ಚಕ ಎಂ.ಎಸ್.ಈರಣ್ಣಯ್ಯ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನೆರವೇರಿತು.
ದೇಗುಲ ಹಾಸನ ಜಿಲ್ಲೆಯ ಗಡಿಭಾಗದಲ್ಲಿರುವ ಹಿನ್ನೆಲೆಯಲ್ಲಿ ಅರಕಲಗೂಡು ತಾಲೂಕಿನಿಂದಲೂ ಹೆಚ್ಚಿನ ಭಕ್ತರು ಆಗಮಿಸಿದ್ದರು
ಶಿವರಾತ್ರಿ ಪೂಜಾ ಮಹೋತ್ಸವದ ಅಂಗವಾಗಿ ದೇವಾಲಯ ಸಮಿತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ದೇವಾಲಯ ಸಮಿತಿಯಿಂದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ದೇವಾಲಯ ಸಮಿತಿ ಅಧ್ಯಕ್ಷ ಪ್ರಸನ್ನ, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ಕೊಡಗು ಜಿಪಂ ಮಾಜಿ ಸದಸ್ಯ ಪುಟ್ಟರಾಜು, ಶನಿವಾರಸಂತೆ ಆರ್‌ಎಫ್‌ಒ ಗಾನಶ್ರೀ, ದೇವಾಲಯ ಸಮಿತಿ ಕಾರ್ಯದರ್ಶಿ ಸುಬ್ಬಯ್ಯ, ಗ್ರಾಮದ ಹಿರಿಯ ಧರ್ಮಪ್ಪ ಮತ್ತಿತರರು ಇದ್ದರು.