ಶಕ್ತಿ ಯೋಜನೆ ಯಶಸ್ವಿ

h14-KSRTC 1
Published on

ಹುಬ್ಬಳ್ಳಿ: ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸಲು ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಈ ಯೋಜನೆಯಡಿ 500 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. 12 ಸಾವಿರ ಕೋಟಿ ರೂ. ಖರ್ಚಾಗಿದೆ. ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯು ಯಶಸ್ವಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಬಣ್ಣಿಸಿದರು.

ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿ ಯೋಜನೆ ಯಶಸ್ವಿಯಾಗೊಳಿಸಿದ್ದರಿಂದ ಇಲ್ಲಿಯ ಹೊಸೂರ ಬಸ್ ನಿಲ್ದಾಣದಲ್ಲಿ ಸೋಮವಾರ ಸರ್ಕಾರಿ ಬಸ್‌ಗಳಿಗೆ ಪೂಜೆ ಹಾಗೂ ಸಿಹಿ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಯೋಜನೆ ಯಶಸ್ವಿಯಾಗಲು ಸರ್ಕಾರದ ಜತೆಗೆ ಸಾರಿಗೆ ಇಲಾಖೆ ಸಿಬ್ಬಂದಿ ಕಾರ್ಯ ಪ್ರಮುಖವಾಗಿದೆ. ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ, ಅಧಿಕಾರಿಗಳು ಪ್ರಮುಖ ಪಾತ್ರವಹಿಸಿದ್ದಾರೆ. ಮಹಾರಾಷ್ಟ್ರ, ತಮಿಳುನಾಡು ರಾಜ್ಯಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹೆಚ್ಚು ಬಸ್‌ಗಳಿವೆ. 25 ಸಾವಿರಕ್ಕೂ ಹೆಚ್ಚು ಬಸ್‌ಗಳಿವೆ. ಪ್ರತಿ ದಿನ ಸುಮಾರು 1.20 ಕೋಟಿ ಪ್ರಯಾಣಿಕರು ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಶೇ. 45ರಷ್ಟು ಮಹಿಳಾ ಪ್ರಯಾಣಿಕರು ಹೆಚ್ಚಳವಾಗಿದ್ದಾರೆ. ಅಲ್ಲದೇ ಮಹಿಳಾ ಉದ್ಯೋಗಿಗಳ ಸಂಖ್ಯೆ ಹೆಚ್ಚಾಗಿದೆ. ಆ ಮೂಲಕ ಉದ್ಯೋಗಗಳ ಸೃಷ್ಟಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದರು.

ಸಾರಿಗೆ ಇಲಾಖೆಯಲ್ಲಿ 10 ಸಾವಿರಕ್ಕೂ ಅಧಿಕ ಉದ್ಯೋಗಗಳನ್ನು ಭರ್ತಿ ಮಾಡಲಾಗಿದೆ. 5 ಸಾವಿರ ಹೊಸ ಬಸ್‌ಗಳನ್ನು ಖರೀದಿಸಲಾಗಿದೆ. ರಾಜ್ಯದಲ್ಲಿ 25 ಸಾವಿರಕ್ಕೂ ಹೆಚ್ಚು ಬಸ್‌ಗಳು ಸಂಚಾರ ಮಾಡುತ್ತಿವೆ. ಕಳೆದ ಎರಡು ವರ್ಷದಲ್ಲಿ ಸುಮಾರು 150ಕ್ಕೂ ಹೆಚ್ಚು ಪ್ರಶಸ್ತಿ ಬಂದಿವೆ. 2019ರ ಡೀಸೆಲ್ ದರಕ್ಕೂ ಇಂದಿನ ದರಕ್ಕೂ 30 ರಿಂದ 40 ರೂ.ನಷ್ಟು ಹೆಚ್ಚಳವಾಗಿದೆ. ಸಂಬಳದಲ್ಲಿ ಶೇ. 15 ರಷ್ಟು ಹೆಚ್ಚಿಸಲಾಗಿದೆ. ರಾಜ್ಯದ ವಿವಿಧ ಪ್ರಸಿದ್ಧ ದೇವಾಲಯ, ಮಂದಿರ ಹಾಗೂ ಪ್ರವಾಸಿ ತಾಣಗಳಿಗೆ ಮಹಿಳೆಯರು ಭೇಟಿ ನೀಡುತ್ತಿದ್ದಾರೆ. 5600 ಬಸ್‌ಗಳಲ್ಲಿ 5 ಸಾವಿರ ಬಸ್‌ಗಳನ್ನು ಖರೀದಿಸಲಾಗಿದೆ. ಹೊಸದಾಗಿ 300 ಬಸ್‌ಗಳು ಬರಲಿವೆ ಎಂದರು.

ಕರ್ನಾಟಕ ಕೊಳಚೆ ಅಭಿವೃದ್ದಿ ಮಂಡಳಿಯ ಅಧ್ಯಕ್ಷ, ಶಾಸಕ ಅಬ್ಬಯ್ಯ ಪ್ರಸಾದ, ಶಾಸಕ ಎನ್.ಎಚ್. ಕೋನರಡ್ಡಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ. ಮಾತನಾಡಿದರು.

ಇದೇ ವೇಳೆ ಸಚಿವರು ಮಹಿಳಾ ಪ್ರಯಾಣಿಕರಿಗೆ ಸಿಹಿ ತಿನಿಸಿ, ಟಿಕೆಟ್ ವಿತರಿಸಿದರು. ಸಂಸ್ಥೆಯ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ಮಾಜಿ ಸಂಸದ ಪ್ರೊ.ಐ.ಜಿ. ಸನದಿ, ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ, ಎಂ.ಎಸ್. ಅಕ್ಕಿ, ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಪಂ ಸಿಇಒ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ಮಹಾನಿಂಗ ನಂದಗಾಂವಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಧಾರವಾಡ ಜಿಲ್ಲಾಧ್ಯಕ್ಷ ಶ್ಯಾನಪ್ಪಗೌಡ ಪಾಟೀಲ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net