ಖಾಕಿ ಮೇಲೆ ಹಲ್ಲೆಗೆ ಯತ್ನಿಸಿದವನ ಕಾಲಿಗೆ ಗುಂಡೇಟು

police
ಆರೋಪಿ ಶ್ರೀನಿವಾಸ್‌ನನ್ನು ಆಸ್ಪತ್ರೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ರವಿಕುಮಾರ್ ಮತ್ತು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್ ಸಾದಿಕ್ ಪಾಷಾ ವಿಚಾರಣೆ ನಡೆಸಿದರು.
Published on

ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದವನನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹಾರಿಸಿ, ಬಂಧಿಸಲಾಗಿದೆ.
ತಾಲೂಕಿನ ಮೇಡಹಳ್ಳಿಯ ರೌಡಿಶೀಟರ್ ಶ್ರೀನಿವಾಸ್ ಬಂಧಿತ. ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ರೌಡಿಶೀಟರ್ ಶ್ರೀನಿವಾಸ್‌ನನ್ನು ಬಂಧಿಸಲು ತೆರಳಿದ್ದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಚಂದ್ರಶೇಖರ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಕಾಲಿಗೆ ಗುಂಡು ಹಾರಿಸಿದ್ದಾರೆ.
ಪ್ರಕರಣವೇನು?: ಮೇ 11ರಂದು ದೊಡ್ಡಬಳ್ಳಾಪುರ ಹೊರವಲಯದ ನವೋದಯ ಶಾಲೆ ಸಮೀಪ ಹೇಮಂತ್‌ಗೌಡ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನರಸಿಂಹಮೂರ್ತಿ ಮತ್ತು ಆತನ ಸ್ನೇಹಿತರ ಮೇಲೆ ಪ್ರಕರಣ ದಾಖಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಪೊಲೀಸರು, ತಲೆಮರೆಸಿಕೊಂಡಿದ್ದ ಆರೋಪಿಗಳ ಬೆನ್ನತ್ತಿದ್ದರು. ಈ ವೇಳೆ ಶುಕ್ರವಾರ ಖಚಿತ ಮಾಹಿತಿ ಮೇರೆಗೆ ಪ್ರಕರಣದ 2ನೇ ಆರೋಪಿ ಶ್ರೀನಿವಾಸ್‌ನನ್ನು ಯಲಹಂಕ ತಾಲೂಕಿನ ಶ್ರೀರಾಮನಹಳ್ಳಿ ಸಮೀಪ ಬಂಧಿಸಲು ಹೋದಾಗ, ಚಾಕುವಿನಿಂದ ಹಲ್ಲೆಗೈದು ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಈ ವೇಳೆ ಆರೋಪಿಗೆ ಶರಣಾಗುವಂತೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದರೂ ಪುನಃ ಹಲ್ಲೆ ನಡೆಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಗ್ರಾಮಾಂತರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಸಾಧಿಕ್‌ಪಾಷಾ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ತಿಳಿಸಿದ್ದಾರೆ.
ಸದ್ಯ ಆರೋಪಿ ಶ್ರೀನಿವಾಸ್ ಮತ್ತು ಗಾಯಗೊಂಡಿರುವ ಹೆಡ್‌ಕಾನ್‌ಸ್ಟೇಬಲ್ ಚಂದ್ರಶೇಖರ್ ಅವರಿಗೆ ದೊಡ್ಡಬಳ್ಳಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net