ಬೆಂಗಳೂರಿನ ಆಭರಣದಂಗಡಿಯಲ್ಲಿ ಗುಂಡಿನ ದಾಳಿ! ಇಬ್ಬರು ಗಂಭೀರ, ಆರೋಪಿ ಪರಾರಿ

WhatsApp Image 2024-03-14 at 2.19.33 PM
Published on

ಕೊಡಿಗೇಹಳ್ಳಿ: ಇಂದು ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿ ಸಂಭವಿಸುತ್ತಿದ್ದಂತೆ ಸ್ಥಳೀಯರು ಓಡೋಡಿ ಬಂದಿದ್ದು, ತಕ್ಷಣವೇ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಇಂದು ಮುಂಜಾನೆ 11 ಗಂಟೆಗೆ ಈ ಘಟನೆ ನಡೆದಿದ್ದು, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದೇವಿನಗರದಲ್ಲಿರುವ ಲಕ್ಷ್ಮಿ ಜ್ಯುವೆಲರ್ಸ್ ಎಂಬ ಆಭರಣದ ಮಳಿಗೆಯಲ್ಲಿ ದರೋಡೆಗೆ ಯತ್ನಿಸಿದ್ದಾರೆ. ಕಿಡಿಗೇಡಿಗಳ ಆಮಿಷಕ್ಕೆ ಒಪ್ಪದ ಚಿನ್ನಾಭರಣ ಮಳಿಗೆಯ ಮಾಲೀಕರು, ಕೇಳಿದಷ್ಟು ಹಣ ಕೊಡಲು ವಿರೋಧಿಸಿದ್ದಾರೆ. ಇದರಿಂದ ಕುಪಿತಗೊಂಡ ದುಷ್ಕರ್ಮಿಗಳು ಗುಂಡು ಹಾರಿಸಿ, ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಗುಂಡಿನ ದಾಳಿಯಲ್ಲಿ ಅಂಗಡಿ ಸಿಬ್ಬಂದಿ ಗಾಯಗೊಂಡಿದ್ದು, ಒಟ್ಟು ಮೂರು ಸುತ್ತು ಗುಂಡು ಹಾರಿಸಲಾಗಿದೆ ಎಂದು ವರದಿಯಾಗಿದೆ. ಆರೋಪಿಗಳು ಜ್ಯುವೆಲ್ಲರಿ ಅಂಗಡಿ ಮಾಲೀಕರನ್ನು ಕೊಲ್ಲಲು ಸುಪಾರಿ ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯಕ್ಕೆ ಆಭರಣ ಮಳಿಗೆಯಲ್ಲಿ ಕಳ್ಳತನ ನಡೆದಿರುವುದು ಪತ್ತೆಯಾಗಿಲ್ಲ. ದರೋಡೆಕೋರರು ಗುಂಡು ಹಾರಿಸಿದ ನಂತರ ಅವರು ಬಳಸಿದ ಬಂದೂಕನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಶೂಟರ್‌ಗಳು ಬೈಕ್‌ನಲ್ಲಿ ಸ್ಥಳದಿಂದ ಪರಾರಿಯಾಗುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ತೋರಿಸಿದೆ.

ಸದ್ಯ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಸುತ್ತಮುತ್ತಲಿನ ಸಿಸಿಟಿವಿಯನ್ನು ಪರಿಶೀಲಿಸುತ್ತಿದ್ದಾರೆ. ಇದೇ ವೇಳೆ ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ಅಪ್ಪುರಂ ಮತ್ತು ಆನಂದರಾಮ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net