

ಚನ್ನರಾಯಪಟ್ಟಣ: ಕನ್ನಡ ನಾಡ ಹಬ್ಬ ರಾಜ್ಯೋತ್ಸವದ ವೇಳೆಗೆ ಎಲ್ಲಾ ವಾಣಿಜ್ಯ ಮಳಿಗೆ, ಅಂಗಡಿ, ಮುಗ್ಗಟ್ಟುಗಳು ಕನ್ನಡ ನಾಮಫಲಕಗಳನ್ನು ಅಳವಡಿಸದಿದ್ದಲ್ಲಿ ಪುರಸಭಾ ವತಿಯಿಂದ ಅಂಗಡಿ, ಮುಗ್ಗಟ್ಟುಗಳನ್ನು ಬಂದ್ ಮಾಡಿಸಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಎಚ್ಚರಿಸಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕನ್ನಡ ನಾಡು, ನುಡಿ ಹಾಗೂ ನೆಲ-ಜಲದ ಗೌರವ ಹೆಚ್ಚಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ನಾಡು-ನುಡಿ, ಜಲ-ನೆಲ ರಕ್ಷಣೆಯ ಜತೆಗೆ ಕರ್ನಾಟಕದ ಭವ್ಯ ಸಂಸ್ಕೃತಿ, ಪರಂಪರೆ, ಇತಿಹಾಸ ಸ್ಮರಿಸಿ ಅದನ್ನು ಉಳಿಸಿಕೊಂಡು ನಾಡು ಕಟ್ಟುವ ಸಂಕಲ್ಪ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುವುದು ಎಲ್ಲರ ಕರ್ತವ್ಯ ಎಂದರು.
ರಾಜ್ಯೋತ್ಸವ ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೇರಣಾತ್ಮಕ ಪುಸ್ತಕ ಹಾಗೂ ಹೂ ನೀಡಿ ಅಭಿನಂದಿಸಲಾಗುವುದು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು. ಎಲ್ಲೆಡೆ ಕನ್ನಡಧ್ವಜ ರಾರಾಜಿಸಬೇಕು. ಕಚೇರಿಗಳಿಗೆ ವಿದ್ಯುದ್ದೀಪಾಲಂಕಾರ ಮಾಡಬೇಕು ಎಂದರು.
ಕಾರ್ಯಕ್ರಮವನ್ನು ಪಟ್ಟಣದ ಪೊಲೀಸ್ ಠಾಣೆ ಎದುರಿನ ಮಾಧ್ಯಮಿಕ ಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಭಾಗವಹಿಸುವ ಎಲ್ಲ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಹಾಗೂ ಸಿಹಿ ಹಂಚುವ ತೀರ್ಮಾನ ಕೈಗೊಳ್ಳಲಾಗಿದೆ. ಶಾಲಾ ಮಕ್ಕಳಿಂದ ಮೂರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಹಾಗೂ ಕಾರ್ಯಕ್ರಮದ ನಂತರ ಕನ್ನಡ ನಾಡು, ನುಡಿ, ಸಂಸ್ಕೃತಿ ಬಿಂಬಿಸುವ ಐದು ಸ್ತಬ್ದ ಚಿತ್ರಗಳನ್ನು ಪಟ್ಟಣದಲ್ಲಿ ಮೆರವಣಿಗೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕನ್ನಡಪರ, ರೈತಪರ ಸಂಘಟನೆಗಳು ಮತ್ತು ತಾಲೂಕಿನ ಪ್ರತಿ ಇಲಾಖೆಯ ಅಧಿಕಾರಿಗಳು ಹಾಜರಿರಬೇಕು ಎಂದು ಹೇಳಿದರು.
ತಹಸೀಲ್ದಾರ್ ವಿ.ಎಸ್.ನವೀನ್ ಕುಮಾರ್ ಮಾತನಾಡಿ, ರಾಜ್ಯೋತ್ಸವ ಆಚರಣೆ ಕುರಿತಾಗಿ ಸಿದ್ಧಪಡಿಸಲಾಗಿರುವ ರೂಪುರೇಷೆಯನ್ನು ಸಭೆಯ ಗಮನಕ್ಕೆ ತಂದರು. ಈ ವೇಳೆ ಪುರಸಭೆ ಅಧ್ಯಕ್ಷೆ ಕೆ.ಎನ್.ಬನಶಂಕರಿ ರಘು, ಉಪಾಧ್ಯಕ್ಷೆ ರಾಣಿಕೃಷ್ಣ, ಬಿಇಒ ಎಚ್.ಎನ್ ದೀಪಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅನಿತಾ, ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ದಂಡೋರ ಮಂಜುನಾಥ್, ಚ.ನಾ.ಅಶೋಕ್, ಜ್ಞಾನದರ್ಶಿನಿ ಮಹಾದೇವ್, ಶಂಕರಲಿಂಗೇಗೌಡ, ಕಬ್ಬಾಳು ಮಹೇಶ್ ಮತ್ತಿತರರಿದ್ದರು.