ಅ.7ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

26SPT3
ಸೋಮವಾರಪೇಟೆ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಕೃಷ್ಣಮೂರ್ತಿ ಮಾತನಾಡಿದರು. ವೇದಕುಮಾರ್, ದಿವಿಲ್ ಕುಮಾರ್, ನಿರ್ವಾಣಪ್ಪ ಇದ್ದರು.
Published on

ಸೋಮವಾರಪೇಟೆ: ತಾಲೂಕು ಆಡಳಿತದಿಂದ ಅ.7ರಂದು ನಡೆಸಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಂಬಂಧ ತಹಸೀಲ್ದಾರ್ ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ಶುಕ್ರವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.

ದಲಿತ ಮುಖಂಡ ನಿರ್ವಾಣಪ್ಪ ಮಾತನಾಡಿ, ಸಾಧಕರ ಜಯಂತಿಯನ್ನು ಎಲ್ಲರೂ ಒಟ್ಟಿಗೆ ಸೇರಿ ಆಚರಿಸಬೇಕಿದೆ. ಯಾರೊಬ್ಬ ಸಾಧಕರು ಒಂದು ಜಾತಿ, ಧರ್ಮಕ್ಕೆ ಮಾತ್ರ ಸೀಮಿತವಲ್ಲ. ಮುಂದಿನ ದಿನಗಳಲ್ಲಿ ಎಲ್ಲರೂ ಸೇರಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಿದಲ್ಲಿ ಮಾತ್ರ ಮಹನಿಯರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.

ತೋಳೂರು ಶೆಟ್ಟಳ್ಳಿಯ ಸುರೇಶ್ ಮಾತನಾಡಿ, ಹಲವು ಮಹನೀಯರ ಆಚರಣೆಗಳನ್ನು ಸರ್ಕಾರಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಸೇರಿ ಆಚರಿಸಲು ಸರ್ಕಾರ ವ್ಯವಸ್ಥೆ ಮಾಡಿದೆ. ಆದರೆ ಯಾವುದೇ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸರ್ಕಾರಿ ಸಿಬ್ಬಂದಿ ಭಾಗವಹಿಸುತ್ತಿಲ್ಲ. ರಜೆಯನ್ನು ತಮ್ಮ ಸ್ವಂತ ಕೆಲಸಕ್ಕೆ ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ತಹಸೀಲ್ದಾರ್ ಕೃಷ್ಣಮೂರ್ತಿ ಮಾತನಾಡಿ, ಹಿಂದಿನ ಸಾಲಿನಲ್ಲಿ ಕುಶಾಲನಗರದ ವಾಲ್ಮೀಕಿ ಭವನದಲ್ಲಿ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಒಟ್ಟಾಗಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಬಾರಿ ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿಯೇ ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು.

ಸಭೆಯಲ್ಲಿ ಕೆಡಿಪಿ ಸದಸ್ಯ ವೇದಕುಮಾರ್, ಬಿಎಸ್‌ಪಿ ಜಿಲ್ಲಾಧ್ಯಕ್ಷ ದಿವಿಲ್‌ಕುಮಾರ್, ದಲಿತ ಮುಖಂಡರಾದ ಜಯಪ್ಪ ಹಾನಗಲ್ಲು, ಹೊನ್ನಪ್ಪ, ಶಿವಕುಮಾರ್, ಚಿಕ್ಕ ಅಳುವಾರ ಸ್ನಾತಕ್ಕೋತರ ಕಾಲೇಜಿನ ಪ್ರೊಫೆಸರ್ ಡಾ. ಧರ್ಮಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ, ಜಿಪಂ ಎಇಇ ನಾರಾಯಣಮೂರ್ತಿ, ಪಪಂ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net