

ಮೈಸೂರು: ಸುತ್ತೂರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ (ಶ್ರೀ ಸುತ್ತೂರು ಮಠ) 23ನೇ ಪೀಠಾಧಿಪತಿ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 108ನೇ ಜಯಂತಿಯನ್ನು ಆ.29 ರಂದು ಹಮ್ಮಿಕೊಳ್ಳಲಾಗಿದೆ ಎಂದು ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಿ.ಜೆ.ಬೆಟಸೂರ ಮಠ ಹೇಳಿದರು.
ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಸುತ್ತೂರು ಶಾಖಾ ಮಠದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಶ್ರೀ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಮಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ‘ರಾಜಗುರು ತಿಲಕ’ ಕೃತಿಯನ್ನು ಸಂಸದ ಪ್ರತಾಪ್ ಸಿಂಹ ಬಿಡುಗಡೆ ಮಾಡುವರು. ‘ಪ್ರಸಾದ’ ವಿಶೇಷ ಸಂಚಿಕೆಯನ್ನು ಶಾಸಕ ಜಿ.ಟಿ.ದೇವೇಗೌಡ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.
ಮಧ್ಯಾಹ್ನ 3ಕ್ಕೆ ಜೆಎಸ್‌ಎಸ್ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದವರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದ್ದು, ಈ ಬಾರಿ 148 ಮಂದಿ ನಿವೃತ್ತರಾಗಿದ್ದು, 54 ಮಂದಿ ಕೆಲಸದಿಂದ ಬಿಡುಗಡೆ ಹೊಂದಿದ್ದಾರೆ. 20 ಮಂದಿ ಸೇವೆಯಲ್ಲಿದ್ದಾಗಲೇ ನಿಧನರಾಗಿದ್ದು ಅವರ ಕುಟುಂಬದವರಿಗೆ ಸಾಂತ್ವನ ಹೇಳಿ ಅಭಿನಂದಿಸಲಾಗುವುದು ಎಂದರು.
ಜೆಎಸ್‌ಎಸ್ ವಿದ್ಯಾಸಂಸ್ಥೆಗಳಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಜೆಎಸ್‌ಎಸ್ ಶಾಲಾ, ಕಾಲೇಜುಗಳ ಉತ್ತಮ ವಾರ್ಷಿಕ ಸಂಚಿಕೆಗಳಿಗೆ ಹಾಗೂ ಪ್ರಸಾದ ದ್ವೈಮಾಸಿಕ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತರಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಜತೆಗೆ ನೇತ್ರ, ರಕ್ತ, ಅಂಗಾಂಗಳು, ದೇಹ ದಾನದ ಬಗ್ಗೆ ಮಾಹಿತಿ ನೀಡಲು ಮತ್ತು ನೋಂದಣಿ ಮಾಡಿಕೊಳ್ಳಲು ಜೆಎಸ್‌ಎಸ್ ಆಸ್ಪತ್ರೆಯಿಂದ ಮಾಹಿತಿ ಕೇಂದ್ರ ತೆರೆಯಲಾಗುವುದು ಎಂದರು.
ಜೆಎಸ್‌ಎಸ್ ಮಹಾವಿದ್ಯಾಪೀಠದ ಎಲ್ಲ ಅಂಗಸಂಸ್ಥೆಗಳು, ವಿವಿಧ ಸಂಘಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ವಿವಿಧೆಡೆ ಶ್ರೀಗಳ ಜಯಂತಿ ಆಚರಿಸಲಾಗುತ್ತಿದೆ. ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಣೆ, ಶಾಲಾ ಕಾಲೇಜುಗಳಲ್ಲಿ ಸಸಿ ನೆಡುವುದು, ವಿಚಾರ ಸಂಕಿರಣ, ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ಆರೋಗ್ಯದ ಅರಿವು, ಉಚಿತ ಆರೋಗ್ಯ ತಪಾಸಣಾ ಶಿಬಿರ, ಗಾಲಿಕುರ್ಚಿ, ಶ್ರವಣದೋಷ ಉಳ್ಳವರಿಗೆ ಉಚಿತವಾಗಿ ಉಪಕರಣ ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್, ಬ್ಯಾಗ್, ಸಮವಸ್ತ್ರ ವಿತರಿಸಲಾಗುತ್ತಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಗೋಷ್ಠಿಯಲ್ಲಿ ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಶಿವಕುಮಾರಸ್ವಾಮಿ, ಕಾಲೇಜು ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ನಿರಂಜನಮೂರ್ತಿ ಇದ್ದರು.