

ಧಾರವಾಡ: ಶ್ರೀಕೃಷ್ಣನ ಸಂದೇಶಗಳು ಸಾರ್ವಕಾಲಿಕವಾಗಿವೆ. ಭಾರತೀಯರು ಶ್ರೀಕೃಷ್ಣನಿಗೆ ಶ್ರೇಷ್ಠ ಸ್ಥಾನ ನೀಡಿದ್ದಾರೆ. ಮಹಾಭಾರತ ಮತ್ತು ಭಗವದ್ಗೀತೆಯಲ್ಲಿ ಕೃಷ್ಣನ ಸಂದೇಶಗಳನ್ನು ವಿವರಿಸಲಾಗಿದೆ ಎಂದು ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ. ಹೇಳಿದರು.
ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತದಿಂದ ಬುಧವಾರ ಆಯೋಜಿಸಿದ್ದ ಭಗವಾನ್ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ಕೆ.ಆರ್. ದುರ್ಗಾದಾಸ್ ವಿಶೇಷ ಉಪನ್ಯಾಸ ನೀಡಿದರು. ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು ಪದವಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.
ಜಿಲ್ಲಾ ಗೊಲ್ಲ, ಯಾದವ ಹಾಗೂ ಇತರ ಸಮಾಜಗಳ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಆರತಿ ದೇವಶಿಖಾಮಣಿ ನಿರೂಪಿಸಿದರು.