ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಶುಶ್ರೂತ್ ಗೌಡ ಬಿಜೆಪಿ ಸೇರ್ಪಡೆ

Shushrut Gowda joins BJP
Published on

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ.ಶುಶ್ರೂತ್ ಗೌಡ ಮತದಾನಕ್ಕೆ ಎರಡು ದಿನ ಬಾಕಿ ಇರುವಾಗ ಕಾಂಗ್ರೆಸ್ ತೊರೆದು ಬುಧವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡರು. ನಂತರ ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ಅವರು ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸೇರ್ಪಡೆಗೆ ಕಾರಣವಾದ ಅಂಶಗಳನ್ನು ವಿವರಿಸಿದರು.

ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚು ಕೆಲಸ ಮಾಡುವ ಬಯಕೆಯನ್ನು ಹೊಂದಿದ್ದೇನೆ. ಈ ಕಾರಣಕ್ಕೆ ಅಮೆರಿಕದಲ್ಲಿ ವೈದ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾನು 2019ಕ್ಕೆ ಭಾರತಕ್ಕೆ ಹಿಂತಿರುಗಿದೆ. ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗುವುದು ನಿಶ್ಚಿತವಾಗಿದ್ದು, ಎನ್‌ಡಿಎ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆ ಹೊಂದಿದ್ದೇನೆ. ಹಾಗಾಗಿ ಮುಂದೆ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ನನಗೆ ಕೆಲಸ ಮಾಡುವ ಅವಕಾಶಗಳು ದೊರೆಯಲಿದೆ ಎಂದರು.

ನಾನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ, ಈ ಬಾರಿ ನನಗೆ ಸ್ಪರ್ಧಿಸಲು ಅವಕಾಶ ದೊರೆಯಲಿಲ್ಲ. ಮೋದಿ ಅವರ ಆಡಳಿತ ಹಾಗೂ ಬಿಜೆಪಿ ಅಭ್ಯರ್ಥಿ ಯದುವೀರ್ ಅವರನ್ನು ಗೆಲ್ಲಿಸಬೇಕು ಎಂಬ ಉದ್ದೇಶದಿಂದ ಬಿಜೆಪಿ ಸೇರಿದ್ದೇನೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಎಲ್. ನಾಗೇಂದ್ರ, ಮುಖಂಡರಾದ ಗಿರೀಶ್ ಪ್ರಸಾದ್, ಮಹೇಶ್ ರಾಜೇ ಅರಸ್, ಮೋಹನ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net