ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೇಹ ಸದೃಢ

25-sdp-sports bheemana
Published on

ಸಿದ್ದಾಪುರ: ಶಿಕ್ಷಣದ ಜತೆಗೆ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೇಹ ಸದೃಢಗೊಳಿಸಿಕೊಳ್ಳಲು ಸಾಧ್ಯ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ಪಟ್ಟಣದ ಎಂಜಿಸಿ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ ಎಂಜಿಸಿ ಪಪೂ ಮಹಾವಿದ್ಯಾಲಯದ ಸಹಕಾರದಲ್ಲಿ ಶುಕ್ರವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಪಪೂ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಗುರಿ ಇಟ್ಟುಕೊಂಡು ಮುನ್ನಡೆಯಬೇಕು. ಯುವ ಸಮೂಹ ಹೊಸ ಹೊಸ ತಂತ್ರಜ್ಞಾನದ ಮೂಲಕ ದೇಶದ ಅಭಿವೃದ್ಧಿಗೆ ಮುಂದಾಗಬೇಕು. ಜತೆಗೆ ಕೃಷಿ ಕ್ಷೇತ್ರದಲ್ಲಿಯೂ ಸಾಧನೆ ಮಾಡಬೇಕು. ಶಿಕ್ಷಕರು ಮಕ್ಕಳಿಗೆ ಶಿಸ್ತು ಹಾಗೂ ಸಮಯದ ಮಹತ್ವದ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ಪ್ರಸಾರಕ ಸಮಿತಿ ಉಪಾಧ್ಯಕ್ಷ ಡಾ. ಶಶಿಭೂಷಣ ಹೆಗಡೆ ದೊಡ್ಮನೆ ಮಾತನಾಡಿ, ಯುವ ಸಮೂಹ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಮುಖ್ಯ. ಶಾಸಕರು ತಾಲೂಕು ಕೇಂದ್ರದಲ್ಲಿ ಒಂದು ಒಳಾಂಗಣ ಕ್ರೀಡಾಂಗಣ ಹಾಗೂ ಈಜುಕೊಳ ನಿರ್ಮಿಸಲು ಮುಂದಾಗಬೇಕು ಎಂದರು.
ಕೋಲಸಿರ್ಸಿ ಗ್ರಾಪಂ ಅಧ್ಯಕ್ಷೆ ಹೇಮಾವತಿ ಗೌಡರ್, ಬಿಇಒ ಜಿ.ಐ. ನಾಯ್ಕ, ತಾಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಮಂಜಪ್ಪ ಎಂ.ಜಿ., ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ವಿ. ನಾಯ್ಕ ಇತರರಿದ್ದರು. ಎಂಜಿಸಿ ಪಪೂ ಕಾಲೇಜ್ ಪ್ರಾಚಾರ್ಯ ಶ್ರೀಶೈಲ ಕೊಂಡಗೂಳಿಕರ, ವಿಘ್ನೇಶ್ವರ ಭಟ್ಟ ಹಾಗೂ ನೀರಲಗಿ ಸುರೇಶ ಬಿ. ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net