ಪಂಚ ಗ್ಯಾರಂಟಿ ಅನುಷ್ಠಾನದಲ್ಲಿ ಸಿದ್ದಾಪುರ ತಾಲೂಕು ಫಸ್ಟ್

SDP GYARANTI
Published on

ಸಿದ್ದಾಪುರ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿಯೇ ಉತ್ತರ ಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಶಿರಸಿ ವಿಧಾನಸಭಾ ಕ್ಷೇತ್ರದ ಸಿದ್ದಾಪುರ ತಾಲೂಕು ಪ್ರಥಮ ಸ್ಥಾನದಲ್ಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ಕೆ.ಜಿ. ನಾಗರಾಜ ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಮಟ್ಟದ ಪ್ರಥಮ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆಗಳು ತಾಲೂಕಿನಲ್ಲಿ ಉತ್ತಮವಾಗಿ ಪ್ರಗತಿ ಸಾಧಿಸಲಿಕ್ಕೆ ಇಲಾಖೆ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಸದಸ್ಯರುಗಳು ಆಸಕ್ತಿಯಿಂದ ಕಾರ್ಯನಿರ್ವಹಿಸಿದ್ದಾರೆ. ಮುಂದಿನದಲ್ಲಿ ಗ್ರಾಪಂ ಮಟ್ಟದಲ್ಲಿ ಸಭೆ ನಡೆಸಿ ಗ್ಯಾರಂಟಿ ಯೋಜನೆಗಳ ಕುರಿತು ಸಮರ್ಪಕವಾದ ಮಾಹಿತಿ ನೀಡಲಾಗುವುದು. ಮುಖ್ಯವಾಗಿ ಯುವ ನಿಧಿ ಯೋಜನೆ ಕುರಿತು ಮಾಹಿತಿ ನೀಡಬೇಕಾಗಿದೆ. ಡಿಸೆಂಬರ್-2024ಕ್ಕೆ 352 ಅಭ್ಯರ್ಥಿಗಳಿಗೆ ನಿರುದ್ಯೋಗ ಭತ್ಯೆಯು ಅವರ ಖಾತೆಗೆ ಭರಣವಾಗಿದೆ ಎಂದು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯಲ್ಲಿ ಶೇ. 98 ಮಹಿಳೆಯರು ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಗೃಹಜ್ಯೋತಿಯಲ್ಲಿ ಶೇ. 99.14, ಪಡಿತರ ವ್ಯವಸ್ಥೆಯ ಪ್ರಯೋಜನವನ್ನು 26620 ಪಡಿತರ ಚೀಟಿಗಳಿಂದ 93140 ಫಲಾನುಭವಿಗಳು ಪ್ರಯೋಜನ ಪಡೆದುಕೊಂಡಿದ್ದಾರೆ, ಗ್ಯಾರಂಟಿ ಯೋಜನೆಯನ್ನು ಪಡೆದುಕೊಳ್ಳುವುದಕ್ಕೆ ಅರ್ಹರಿದ್ದರೂ ಕೆಲವರಿಗೆ ಆಧಾರ್ ಕಾರ್ಡ್, ಕೆವೈಸಿ, ಪಡಿತರ ಚೀಟಿ, ಹೆಸರು ಬದಲಾವಣೆ ಸೇರಿ ಮತ್ತಿತರ ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ಅವರಿಗೆ ಸೂಕ್ತ ಮಾಹಿತಿ ನೀಡುವ ಅಗತ್ಯತೆ ಇದೆ. ಆದ್ದರಿಂದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಿದ್ದಾಪುರದಲ್ಲಿ ಕಾರ್ಯಾಗಾರ ನಡೆಸುವ ಉದ್ದೇಶ ಹೊಂದಲಾಗಿದೆ ಎಂದು ಕೆ.ಜಿ. ನಾಗರಾಜ ಹೇಳಿದರು.

ತಾಪಂ ಇಒ ದೇವರಾಜ ಹಿತ್ತಲಕೊಪ್ಪ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ಗ್ಯಾರಂಟಿ ಯೋಜನೆಯ ಇಲಾಖೆಯ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net