ಸಿದ್ದರಾಮಯ್ಯಗೆ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ

new bjp vijayendra new
Published on


ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾಪದ ಕೊಡ ತುಂಬಿದೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದೇ, ಭಂಡತನದಿಂದ ನಡೆದುಕೊಳ್ಳುತ್ತಿದ್ದಾರೆ. ಅವರು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಇಲ್ಲಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿ ಕೇಶವ ಕುಂಜಕ್ಕೆ ಭೇಟಿ ನೀಡಿ, ಸಂಘದ ಪ್ರಮುಖರೊಂದಿಗೆ ರ್ಚಚಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಸಿದ್ದರಾಮಯ್ಯ ಅವರು ಈಗಲಾದರೂ ಭಂಡತನದಿಂದ ಹೊರಬಂದು, ಮುಖ್ಯಮಂತ್ರಿ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಮೈಸೂರಿನ ಕೆಸರೆ ಗ್ರಾಮದಲ್ಲಿ ಅಕ್ರಮ ಜಮೀನು ಖರೀದಿ ಹಾಗೂ ಮುಡಾದಿಂದ ಅಕ್ರಮವಾಗಿ 14 ನಿವೇಶನಗಳನ್ನು ಪಡೆದ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸಿದೆ. ಬಿಜೆಪಿ ನಡೆಸಿದ ಪಾದಯಾತ್ರೆಯನ್ನು ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ಪರಿಗಣಿಸಲಿಲ್ಲ. ಸದನದಲ್ಲಿಯೂ ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡಲಿಲ್ಲ ಎಂದರು.
ಮುಡಾ ಪ್ರಕರಣದಲ್ಲಿ ತನಿಖೆ ನಡೆಸುವಂತೆ ವಿಶೇಷ ನ್ಯಾಯಾಲಯವೂ ಆದೇಶ ನೀಡಿದೆ. ಈ ಪ್ರಕರಣದ ತನಿಖೆ ಸಿಬಿಐನಿಂದ ನಡೆಸಬೇಕೆಂಬ ಅರ್ಜಿಯೂ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ ಎಂದು ತಿಳಿಸಿದರು.
ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಇನ್ನೂ ಎರಡ್ಮೂರು ದಿನಗಳಲ್ಲಿ ನಡೆಯಲಿದೆ. ಈ ಕುರಿತು ಪಕ್ಷದ ವರಿಷ್ಠರೊಂದಿಗೆ ರ್ಚಚಿಸಲು ಭಾನುವಾರ ದೆಹಲಿಗೆ ಹೋಗುತ್ತಿರುವುದಾಗಿ ತಿಳಿಸಿದರು.
ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರೊಂದಿಗೆ ರ್ಚಚಿಸಲಾಗುವುದು. ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆ ಕ್ಷೇತ್ರದ ಪ್ರಮುಖರ ಅಭಿಪ್ರಾಯ ಪಡೆಯಲಾಗುವುದು ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆದಿರುವುದು ಸರಿಯಲ್ಲ. ರಾಷ್ಟ್ರೀಯ ತನಿಖಾ ದಳ ಈ ಪ್ರಕರಣದ ತನಿಖೆ ನಡೆಸುತ್ತಿತ್ತು. ಇದೆಲ್ಲ ಗೊತ್ತಿದ್ದರೂ ಸಿದ್ದರಾಮಯ್ಯ ಸರ್ಕಾರ ಈ ಪ್ರಕರಣವನ್ನು ಹಿಂಪಡೆದಿದೆ. ಇದೊಂದು ದುಷ್ಟ ಸರ್ಕಾರ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಅ. 25ರಂದು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಸರ್ಕಾರದ ನಡೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದರು.
ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ಬಿಜೆಪಿಯಲ್ಲಿ ಇಲ್ಲ. ಸಂಗೊಳ್ಳಿ ರಾಯಣ್ಣ-ಚನ್ನಮ್ಮ ಬ್ರಿಗೇಡ್ ರಚನೆ ಅವರಿಗೆ ಬಿಟ್ಟ ವಿಚಾರ ಎಂದರು.
==

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net