

ಶಿವಮೊಗ್ಗ: ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಬಳಿಕ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಹುಚ್ಚು ಹಿಡಿದಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಅವರಿಂದ ನೋಡುವುದಕ್ಕೂ, ಕೇಳುವುದಕ್ಕೂ ಆಗುತ್ತಿಲ್ಲ, ಅನುಭವಿಸಲಿಕ್ಕೂ ಆಗುತ್ತಿಲ್ಲ. ಅವರಿಗೆ ತಲೆಕೆಟ್ಟಿದ್ದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಏನು ಮಾತನಾಡುತ್ತಿದ್ದೇನೆ ಎಂಬ ಕಲ್ಪನೆ ಇಲ್ಲದೆ ಟೀಕೆಗಳನ್ನು ಮಾಡುತ್ತಿದ್ದಾರೆ. ಅಧಿಕಾರಿಗಳು ಮಾತು ಕೇಳುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಮಾತನ್ನೇ ಯಾರೂ ಕೇಳುತ್ತಿಲ್ಲ. ಕಾಂಗ್ರೆಸ್‌ನಲ್ಲಿ ಅವರು ಕಾಲು ಕಸವಾಗಿದ್ದಾರೆ. ಕಸದ ತೊಟ್ಟಿಯಲ್ಲಿರುವ ವಸ್ತುವಂತಾಗಿದ್ದಾರೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ಅವರು ಒಂದೆರಡು ದಿನಗಳಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಲಿ. ಅಭಿವೃದ್ಧಿಯ ಪಟ್ಟಿಯನ್ನೇ ಅಧಿಕಾರಿಗಳು ನೀಡಲಿದ್ದಾರೆ. ಸ್ವಾತಂತ್ರ್ಯ ನಂತರದ ದಿನಗಳಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಆಗಿರುವ ಕೆಲಸಗಳ ಬಗ್ಗೆ ಪಟ್ಟಿ ನೋಡಿಯೇ ಸಿದ್ದರಾಮಯ್ಯಗೆ ತಲೆಕೆಟ್ಟು ಹೋಗಿದೆ ಎಂದು ಏಕವಚನದಲ್ಲೇ ಕಿಡಿಕಾರಿದರು.