ಗುರುವಾರ ಕೊಡಗಿಗೆ ಸಿದ್ದರಾಮಯ್ಯ

Siddaramaiah to Kodagu on Thursday
Published on

ವಿರಾಜಪೇಟೆ:

ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ (ಜ.೨೫) ಜಿಲ್ಲೆಗೆ ಆಗಮಿಸಲಿದ್ದು, ಅವರು ಜಿಲ್ಲೆಗೆ ಆಗಮಿಸುವುದರಿಂದ ಇಲ್ಲಿನ ಸಮಸ್ಯೆಗಳ ಬಗ್ಗೆ ಅರಿವಾಗಲಿದೆ. ಮುಂದೆ ಜಿಲ್ಲೆಗೆ ಹೆಚ್ಚಿನ ಅನುದಾನಗಳು ದೊರಕಲು ಅನುಕೂಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಹೇಳಿದರು. ಅಂದು ಬೆಳಗ್ಗೆ ೧೦.೩೦ಕ್ಕೆ ವಿರಾಜಪೇಟೆಯ ಸೆಂಟ್ ಆನ್ಸ್ ಮೈದಾನದಲ್ಲಿ ಆಯೋಜಿಸಲಾಗಿರುವ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುತ್ತಾರೆ. ಬಳಿಕ ಮಡಿಕೇರಿಗೆ ತೆರಳಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೂತ ಕಚೇರಿ ಕಟ್ಟಡ ಉದ್ಘಾಟನೆ, ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಭೂಮಿ ಪೂಜೆ, ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ನಂತರ ಮಡಿಕೇರಿಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಪಕ್ಷದ ಸಭೆಯಲ್ಲಿ ಕೂಡ ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಜತೆಗೆ ಗೃಹ ಸಚಿವ ಜಿ. ಪರಮೇಶ್ವರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಆಗಮಿಸಲಿದ್ದಾರೆ ಎಂದು

ಮಂಗಳವಾರ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ಗೃಹ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಈಗಾಗಲೇ ನಮ್ಮ ಸರ್ಕಾರದಿಂದ ಅನೇಕ ಜನಪರ ಯೋಜನೆಗಳನ್ನು ರೂಪಿಸಲಾಗಿದೆ. ವಿರೋಧ ಪಕ್ಷದವರು ಸುಮ್ಮನೆ ಟೀಕೆ ಮಾಡುವ ಬದಲು ಇದುವರೆಗೆ ಎಷ್ಟು ಅಭಿವೃದ್ದಿ ಕಾರ್ಯ ಮಾಡಲಾಗಿದೆ ಎಂಬುದನ್ನು ಅರಿತುಕೊಳ್ಳಬೇಕಿದೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ೧೯೪.೯೦೫ಕೋಟಿ ಅನುದಾನ ಬಿಡುಗಡೆಯ ಆದೇಶವಾಗಿದೆ. ಕೆಲವು ಕಾಮಗಾರಿಗಳ ಅನುದಾನ ಬಿಡುಗಡೆಯಾಗಿ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದರು.

ವಿರಾಜಪೇಟೆ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ, ಗೋಣಿಕೊಪ್ಪಲು ಬಸ್ ನಿಲ್ದಾಣ, ವಿರಾಜಪೇಟೆ ಪಟ್ಟಣದಲ್ಲಿ ಬೀದಿದೀಪ ಹಾಗೂ ಪಾದಚಾರಿ ರಸ್ತೆ ಕಾಮಗಾರಿ, ನೆನೆಗುದ್ದಿಗೆ ಬಿದ್ದಿದ್ದ ಅಂಬೇಡ್ಕರ್ ಭವನ ಮುಂದುವರಿದ ಕಾಮಗಾರಿ, ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿ, ಕ್ರೀಡಾಂಗಣಗಳ ಅಭಿವೃದ್ಧಿ ದೇವಸ್ಥಾನಗಳ ಅಭಿವೃದ್ಧಿ, ಸಮುದಾಯ ಭವನಗಳ ಅಭಿವೃದ್ಧಿ ಸೇರಿದಂತೆ ವಿರಾಜಪೇಟೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅನೇಕ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗಿ ಹಲವು ಮಂಜೂರಾತಿ ಹಂತದಲ್ಲಿದೆ ಎಂದು ಹೇಳಿದರು.

ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕಾಂಗ್ರೆಸ್ ಪ್ರಮುಖ ಕೆ.ಬಿ. ಶಾಂತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net