ಸಿದ್ದರಾಮಯ್ಯ ವರುಣ ಕ್ಷೇತ್ರದಲ್ಲಿ ಮಿಂಚಿನ ಸಂಚಾರ

Siddaramaiah visited Varuna constituency on Thursday
Published on

ಮೈಸೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದ್ದು, ಕ್ಷೇತ್ರದಲ್ಲಿ ಗುರುವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮತದಾರರ ಮನದಾಳವನ್ನು ಅರಿಯುವ ಕಾರ್ಯ ಮಾಡಿದರು. ಶುಕ್ರವಾರ ಸಹ ಸಿದ್ದರಾಮಯ್ಯ ವರುಣ ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ನಂಜನಗೂಡು ತಾಲೂಕಿನ ಹದಿನಾರುಮೊಳೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಉಪ್ಪಾರ ಸಮುದಾಯ ಭವನದ ಉದ್ಘಾಟ ನಾ ಸಮಾರಂಭದಲ್ಲಿ ಗುರುವಾರ ಪಾಲ್ಗೊಂಡ ಸಂದರ್ಭ ‘ವರುಣ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಬೇಕು’ ಎಂದು ಸ್ಥಳೀಯ ನಿವಾಸಿಗಳು ಪಟ್ಟು ಹಿಡಿದರು.

ಈ ಸಂದರ್ಭ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಜಿ ಹಾಕಿದ್ದೇನೆ. ಆದರೆ, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುದನ್ನು ನಿರ್ಧರಿಸಿಲ್ಲ. ಹೈಕಮಾಂಡ್ ಸೂಚಿಸುವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ. ಬಾದಾಮಿ, ಕೋಲಾರ ಅಥವಾ ವರುಣಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದರು.

ನೀವು ಆಶೀರ್ವಾದ ಮಾಡಿದರೆ ಮಾತ್ರ ನಾನು ಅಧಿಕಾರಕ್ಕೆ ಬರಲು ಸಾಧ್ಯ. ನೀವು ಆಶೀರ್ವಾದ ಮಾಡಿದರೆ ಮಾತ್ರ ನಾನು ಕುರ್ಚಿಯಲ್ಲಿ ಕುಳಿತು ಕೊಳ್ಳಲು ಸಾಧ್ಯ. ಉಪ್ಪಾರ ಸಮುದಾಯವರನ್ನು ಸಚಿವರನ್ನಾಗಿ ಮಾಡಿದ್ದು ನಾನು. ಸಮ್ಮಿಶ್ರ ಸರ್ಕಾರದಲ್ಲಿ ಪುಟ್ಟರಂಗಶೆಟ್ಟಿ ಅವರನ್ನು ಮಂತ್ರಿ ಮಾಡಿದೆ. ಪಟ್ಟಭದ್ರ ಹಿತಾಸಕ್ತಿಗಳಿಂದ ಅವರಿಗೆ ಸಚಿವರಾಗಿ ಉತ್ತಮವಾಗಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮೇಲ್ಜಾತಿ ಬಡವರಿಗೆ ಶೇ.10 ರಷ್ಟು ಮೀಸಲಾತಿ ನೀಡಲಾಗಿದೆ. ಈ ರೀತಿ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶ ಇದೆಯಾ? ಈ ಮೀಸಲಾತಿಯನ್ನು ನೀಡಿದವರು ಪ್ರಧಾನಿ ನರೇಂದ್ರ ಮೋದಿ. ಮೇಲ್ವಾರ್ಗದ ಬಡವರಿಗೆ ಮೀಸಲಾತಿ ಕೊಟ್ಟಿದ್ದು ಸಂವಿಧಾನ ವಿರೋಧಿ ನೀತಿಯಾಗಿದೆ. ನಾನು ಈ ಬಗ್ಗೆ ಯಾವ ವೇದಿಕೆಯಲ್ಲಿ ಯಾರ ಜತೆಗೆ ಬೇಕಾದರೂ ಚರ್ಚೆಗೆ ಸಿದ್ಧ ಎಂದರು.

ಗ್ರಾಮಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಗ್ರಾಮಸ್ಥರು ಭರ್ಜರಿ ಸ್ವಾಗತ ಕೋರಿದರು. ಈ ಸಂದರ್ಭ ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net