

ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಕೆಲ ದಿನಗಳಿಂದ ಒಡೆದ ಗ್ರಾಮೊಫೋನ್ ಪೆಟ್ಟಿಗೆಯಂತೆ ಹೇಳಿದ್ದನ್ನೇ ಹೇಳುತ್ತಿದ್ದಾರೆ. ಅವರ ಮಾತುಗಳು ಜನರಿಗೆ ತಿಳಿಯುತ್ತಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ನ ಇತರ ಮುಖಂಡರು ಈ ಹಿಂದೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರದ ಅವಧಿಯಲ್ಲಿ ಮಾಡಿರುವ ಸಾಧನೆ, ಅನುಷ್ಠಾನಗೊಂಡ ಯೋಜನೆ, ಬಿಡುಗಡೆಗೊಂಡ ಅನುದಾನದ ಬಗ್ಗೆ ಮಾತನಾಡುತ್ತಿಲ್ಲ. ಬದಲಾಗಿ, ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತ ಬರುತ್ತಿದ್ದಾರೆ ಎಂದು ದೂರಿದರು.
ಕಳೆದ ಹತ್ತು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ. ಕಾಂಗ್ರೆಸ್ ಮುಖಂಡರು ತಮ್ಮ ವೈಫಲ್ಯ ಮುಚ್ಚಿಕೊಳ್ಳುವುದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರ ಬಡವರಿಗೆ ಮನೆಗಳ ನಿರ್ವಣ, ಹೆದ್ದಾರಿ ನಿರ್ವಣ, ನೂತನ ರೈಲು ನಿಲ್ದಾಣಗಳ ನಿರ್ವಣ, ರೈಲ್ವೆ ಇಲೆಕ್ಟ್ರಿಫಿಕೇಶನ್, ವಿಮಾನ ನಿಲ್ದಾಣಗಳ ಅಭಿವೃದ್ಧಿ ಸೇರಿದಂತೆ ಹತ್ತಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಆದರೆ, ಕಳೆದ ಹತ್ತು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಹತ್ತು ಬಸ್ ನಿಲ್ದಾಣಗಳನ್ನೂ ನಿರ್ವಿುಸಿಲ್ಲ ಎಂದು ಟೀಕಿಸಿದರು.
ರಾಜ್ಯದಲ್ಲಿ ಬರಗಾಲ ಆವರಿಸಿದೆ. ಬೆಂಗಳೂರಿನಲ್ಲಿ ನೀರಿಗಾಗಿ ಪರಿತಪಿಸುವಂತಹ ದುಸ್ಥಿತಿ ನಿರ್ವಣಗೊಂಡಿದೆ. ಬೆಂಗಳೂರಿನ ಜನರು ಐದು ಸಾವಿರ ರೂ. ಬೆಲೆ ನೀಡಿ ಒಂದು ಟ್ಯಾಂಕರ್ ನೀರು ಖರೀದಿಸುತ್ತಿದ್ದಾರೆ. ಟ್ಯಾಂಕರ್ಗಳಿಗೆ ಸಿಗುವ ನೀರು, ಸರ್ಕಾರಕ್ಕೆ ಏಕೆ ಸಿಗುತ್ತಿಲ್ಲ ? ಎಂದು ಬೆಲ್ಲದ ಪ್ರಶ್ನಿಸಿದರು.
ಬೆಂಗಳೂರಿನಲ್ಲಿ ಟ್ಯಾಂಕರ್ ನೀರಿನ ಲಾಬಿ ಪ್ರಾರಂಭಗೊಂಡಿದೆ. ಕಾಂಗ್ರೆಸ್ ಮುಖಂಡರು ಜಲಮಂಡಳಿ ಅಧಿಕಾರಿಗಳೊಂದಿಗೆ ಸೇರಿಕೊಂಡು ಕೃತಕ ನೀರಿನ ಅಭಾವ ಸೃಷ್ಟಿಸುತ್ತಿದ್ದಾರೆ. ನೀರಿನ ಕಳ್ಳಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ ಎಂದರು.
ಲೋಕಸಭೆ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ಶೀಘ್ರದಲ್ಲಿಯೇ ತಮ್ಮ ತಪ್ಪಿನ ಅರಿವು ಆಗುತ್ತದೆ ಎಂದು ಹೇಳಿದರು.
ಪಾಲಿಕೆ ಸದಸ್ಯರಾದ ರಾಮಣ್ಣ ಬಡಿಗೇರ ಹಾಗೂ ಸತೀಶ ಹಾನಗಲ್ ಉಪಸ್ಥಿತರಿದ್ದರು.